ADVERTISEMENT

ಬಾಂಗ್ಲಾ ಹಿಂಸಾಚಾರ | 44 ಪೊಲೀಸರು ಸಾವು: ವರದಿ

ಪಿಟಿಐ
Published 19 ಆಗಸ್ಟ್ 2024, 2:20 IST
Last Updated 19 ಆಗಸ್ಟ್ 2024, 2:20 IST
   

ಢಾಕಾ: ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 44 ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜುಲೈ 20ರಿಂದ ಆಗಸ್ಟ್ 14ರ ನಡುವೆ ದೇಶದಲ್ಲಿ ನಡೆದ ಹಿಂಸಾಚಾರದಲ್ಲಿ 44 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪ್ರಧಾನ ಕಛೇರಿಯ ಮಾಧ್ಯಮ ವಿಭಾಗ ತಿಳಿಸಿದೆ ಎಂದು ಪ್ರಮುಖ ಬಂಗಾಳಿ ಭಾಷೆಯ ಪತ್ರಿಕೆ ಪ್ರೋಥೋಮ್ ಅಲೋ ವರದಿ ಮಾಡಿದೆ.

ಹಸೀನಾ ಅವರು ಭಾರತಕ್ಕೆ ಪಲಾಯನ ಮಾಡಿದ್ದ ದಿನದಂದು (ಆಗಸ್ಟ್ 5 ರಂದು) ಸುಮಾರು 25 ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಆಗಸ್ಟ್ 4ರಂದು 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದಲ್ಲದೆ, ಆಗಸ್ಟ್ 20ರಂದು ಇಬ್ಬರು, ಆಗಸ್ಟ್ 21 ರಂದು ಒಬ್ಬರು ಹಾಗೂ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬರು ಆಗಸ್ಟ್ 14ರಂದು ಮೃತಪಟ್ಟಿದ್ದಾರೆ.

ADVERTISEMENT

ಹತ್ಯೆಗೀಡಾದವರಲ್ಲಿ 11 ಸಬ್‌ಇನ್‌ಸ್ಪೆಕ್ಟರ್‌ಗಳು, ಮೂವರು ಇನ್ಸ್‌ಪೆಕ್ಟರ್‌ಗಳು ಮತ್ತು ಒಬ್ಬರು ಕಾನ್‌ಸ್ಟೆಬಲ್ ಸೇರಿದ್ದಾರೆ.

ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ದೇಶದಲ್ಲಿ ಸೃಷ್ಟಿಯಾದ ಅರಾಜಕತೆಗೆ ನಲುಗಿದ ಶೇಖ್‌ ಹಸೀನಾ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದ್ದರು.

ಬಾಂಗ್ಲಾ ಸ್ವಾತಂತ್ರ್ಯ ಸಮರದಲ್ಲಿ ಭಾಗಿಯಾಗಿದ್ದವರ ಸಂಬಂಧಿಕರಿಗೆ ಸರ್ಕಾರದ ಹುದ್ದೆಗಳಲ್ಲಿ ಶೇ 30ರಷ್ಟು ಮೀಸಲಾತಿ ಕಲ್ಪಿಸುವ ವಿವಾದಾತ್ಮಕ ಮೀಸಲು ವ್ಯವಸ್ಥೆಯನ್ನು ಕೊನೆಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಬೇಡಿಕೆಯಾಗಿತ್ತು.

ಹಸೀನಾ ದೇಶ ಬಿಟ್ಟ ಬಳಿಕವೂ ಕೆಲಕಾಲ ಹಿಂಸಾಚಾರ ಮುಂದುವರಿದಿತ್ತು. ಹಿಂಸಾಚಾರದ ಸುಮಾರು 600ಕ್ಕೂ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.