ಕೊಲಂಬೊ: ಫ್ಯಾಸಿಸ್ಟರು ಸರ್ಕಾರವನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್‌ಗೆ ಪಲಾಯನಗೈದ ನಂತರ ದೇಶದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಭದ್ರತಾ ಪಡೆಗಳ ಮೇಲೆ ಆಕ್ರೋಶಭರಿತ ನಾಗರಿಕರು ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಕೊಲಂಬೊದಲ್ಲಿರುವ ಪ್ರಧಾನಿ ಕಚೇರಿಯನ್ನು ಪ್ರತಿಭಟನಾಕಾರರು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀಲಂಕಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ದೇಶದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವಂತೆ ಶ್ರೀಲಂಕಾದ ಸೇನೆ ಮತ್ತು ಪೋಲೀಸರಿಗೆ ಆದೇಶಿಸಿದ್ದಾರೆ.
ಇದೇ ವೇಳೆ ಪ್ರತಿಭಟನಾಕಾರರು ಹಾಗೂ ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿರುವ ಅವರು, ‘ಶ್ರೀಲಂಕಾ ಸರ್ಕಾರವನ್ನು ವಶಪಡಿಸಿಕೊಳ್ಳುವ ಯತ್ನ ಪ್ಯಾಸಿಸ್ಟ್‌ರಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.
ಮೇ ತಿಂಗಳಲ್ಲಿ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಇಂದು(ಬುಧವಾರ) ಶ್ರೀಲಂಕಾದ ಹಂಗಾಮಿ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.