ADVERTISEMENT

ಶ್ರೀಲಂಕಾ ಅಧ್ಯಕ್ಷ ಗೊಟಬಯ ನಿವಾಸದಲ್ಲಿ ಭಾರಿ ಹಣ ವಶಕ್ಕೆ ಪಡೆದ ಪ್ರತಿಭಟನಾಕಾರರು

ಪಿಟಿಐ
Published 10 ಜುಲೈ 2022, 10:09 IST
Last Updated 10 ಜುಲೈ 2022, 10:09 IST
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ನಿವಾಸಕ್ಕೆ ಮುತ್ತಿಗೆ ಹಾಕಿರುವ ಪ್ರತಿಭಟನಾಕಾರರು
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ನಿವಾಸಕ್ಕೆ ಮುತ್ತಿಗೆ ಹಾಕಿರುವ ಪ್ರತಿಭಟನಾಕಾರರು   

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಅಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

‘ಪ್ರತಿಭಟನಾಕಾರರು ಕರೆನ್ಸಿ ನೋಟುಗಳನ್ನು ಎಣಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಶಪಡಿಸಿಕೊಂಡ ಹಣವನ್ನು ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಲಾಗುತ್ತದೆ’ ಎಂದು ‘ಡೈಲಿ ಮಿರರ್’ ಪತ್ರಿಕೆ ವರದಿ ಮಾಡಿದೆ.

ಘಟನೆಯನ್ನು ಪರಿಶೀಲಿಸಿದ ನಂತರ ವಾಸ್ತವ ತಿಳಿಯಲು ಸಾಧ್ಯ. ಅದಕ್ಕಾಗಿ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನಾಕಾರರು ಶನಿವಾರ ಮಧ್ಯ ಕೊಲಂಬೊದಲ್ಲಿರುವ ರಾಜಪಕ್ಸೆ ಅವರ ನಿವಾಸಕ್ಕೆ ನುಗ್ಗಿದರು. ಅದಕ್ಕೂ ಮೊದಲೇ ರಾಜಪಕ್ಸೆ ನಿವಾಸದಿಂದ ಪಲಾಯನ ಮಾಡಿದ್ದರು. ಪ್ರತಿಭಟನಾಕಾರರ ಮತ್ತೊಂದು ಗುಂಪು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದೆ. ಅವರೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷ ಗೊಟಬಯ ಎಲ್ಲಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಮಧ್ಯೆ ಅವರು ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರೊಂದಿ ಸಂವಹನ ನಡೆಸಿದ್ದು, ಬುಧವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.