ಇಸ್ಲಾಮಾಬಾದ್/ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಲೂಚ್ ಉಗ್ರರು 9 ಮಂದಿ ಪ್ರಯಾಣಿಕರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಝೋಬ್ ಜಿಲ್ಲೆಯ ಸುರ್-ಡಕೈ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ತಿಳಿಸಿದ್ದಾರೆ.
ಶಸ್ತ್ರಸಜ್ಜಿತ ಉಗ್ರರು ಪಂಜಾಬ್‌ಗೆ ಹೋಗುತ್ತಿದ್ದ ಎರಡು ಬಸ್‌ಗಳನ್ನು ತಡೆದಿದ್ದಾರೆ. ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 9 ಪ್ರಯಾಣಿಕರನ್ನು ಬಸ್‌ಗಳಿಂದ ಇಳಿಸಿ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಆಲಂ ಹೇಳಿದ್ದಾರೆ.
ಮೃತ 9 ಮಂದಿ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಿಗೆ ಸೇರಿದವರು ಎಂದೂ ಅವರು ತಿಳಿಸಿದ್ದಾರೆ.
ನಿಷೇಧಿತ ಸಂಘಟನೆ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLF) ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ.
9 ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಉಗ್ರರರ ಪತ್ತೆಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾ ಆರಂಭಿಸಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಯಾಣಿಕರ ಹತ್ಯೆಯನ್ನು ಖಂಡಿಸಿದ ಬಲೂಚಿಸ್ತಾನ ಮುಖ್ಯಮಂತ್ರಿ ಮೀರ್ ಸರ್ಫರಾಜ್ ಬುಗ್ತಿ, 'ಅಮಾಯಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ' ಎಂದು ಹೇಳಿದ್ದಾರೆ.
ಭಯೋತ್ಪಾದಕರು ತಾವು ಮನುಷ್ಯರಲ್ಲ, ಹೇಡಿತನದ ಮೃಗಗಳು ಎಂದು ಸಾಬೀತುಪಡಿಸಿದ್ದಾರೆ. ಬಲೂಚಿಸ್ತಾನದ ನೆಲದಲ್ಲಿ ಅಮಾಯಕರ ರಕ್ತ ವ್ಯರ್ಥವಾಗಲು ಬಿಡುವುದಿಲ್ಲ. ಹಂತಕರು ಎಲ್ಲೇ ಅಡಗಿದ್ದರೂ ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಬುಗ್ತಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.