ADVERTISEMENT

ರಷ್ಯಾಗೆ ಯುದ್ಧ ನಿಲ್ಲಿಸಿ ಎಂದು ನಾವು ಹೇಳಲು ಸಾಧ್ಯವೇ?: ಮುಖ್ಯ ನ್ಯಾಯಮೂರ್ತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಮಾರ್ಚ್ 2022, 10:23 IST
Last Updated 3 ಮಾರ್ಚ್ 2022, 10:23 IST
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ: ಪಿಟಿಐ ಚಿತ್ರ
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ: ಪಿಟಿಐ ಚಿತ್ರ   

ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾಗಿದ್ದ ಪೋಸ್ಟ್ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಷ್ಯಾವನ್ನು ಯುದ್ಧ ನಿಲ್ಲಿಸಿ ಎಂದು ನಾವು ಕೇಳಲು ಸಾಧ್ಯವೇ? ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸ್ಥಳಾಂತರ ಪ್ರಕ್ರಿಯೆ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಅವರು, ಇದೇ ಸಂದರ್ಭ ತಮ್ಮನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದ ಬಗ್ಗೆ ಹೇಳಿಕೊಂಡಿದ್ದಾರೆ.

‘ಸಿಜೆಐ ಏನು ಮಾಡುತ್ತಿದ್ದಾರೆ? ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಪ್ರಶ್ನಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. ಯುದ್ಧ ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷರಿಗೆ ನಾನು ನಿರ್ದೇಶನ ಕೊಡಬಹುದೇ?’ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದಾರೆ.

ADVERTISEMENT

‘ಭಾರತೀಯರನ್ನು ಕರೆತರಲು ಪೋಲೆಂಡ್, ಹಂಗೇರಿಗಳಿಂದ ವಿಮಾನಗಳ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ, ರೊಮೇನಿಯಾದಿಂದ ಕಾರ್ಯಾಚರಣೆ ನಡೆಸುತ್ತಿಲ್ಲ. ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೈಕಿ ಹಲವು ಹೆಣ್ಣುಮಕ್ಕಳೂ ಇದ್ದಾರೆ. ಅವರಿಗೆ ಯಾವುದೇ ಸೌಕರ್ಯ ನೀಡಲಾಗಿಲ್ಲ’ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ನಮ್ಮ ಸಹಾನುಭೂತಿ ಇದೆ. ನ್ಯಾಯಾಲಯ ಏನು ಮಾಡಬಹುದೋ ಅದನ್ನು ಮಾಡುತ್ತೇವೆ’ಎಂದು ಹೇಳಿದೆ.

ವಕೀಲರ ವಾದವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯವು ರೊಮೇನಿಯಾ ಗಡಿಯಲ್ಲಿ ಸಿಲುಕಿರುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರಿಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.