ADVERTISEMENT

ಕೊರೊನಾ ಹೆಚ್ಚಳ: ಭಾರತದಿಂದ ತನ್ನವರನ್ನು ವಾಪಸ್‌ ಕರೆಸಿಕೊಳ್ಳಲು ಮುಂದಾದ ಚೀನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಮೇ 2020, 2:58 IST
Last Updated 26 ಮೇ 2020, 2:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ/ಬೀಜಿಂಗ್: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಬೆನ್ನಲ್ಲೇ ಚೀನಾ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಅಲ್ಲಿನ ಸರ್ಕಾರ ಮುಂದಾಗಿದೆ. ವಿಶೇಷ ವಿಮಾನ ವ್ಯವಸ್ಥೆ ಮಾಡುವ ಸಲುವಾಗಿ ಬುಧವಾರದ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ನವದೆಹಲಿಯಲ್ಲಿರುವ ಚೀನಾ ರಾಯಭಾರ ಕಚೇರಿ ತನ್ನ ಪ್ರಜೆಗಳಿಗೆ ಸೂಚಿಸಿದೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದು ಮಾತ್ರವಲ್ಲದೆ, ಪೂರ್ವ ಲಡಾಕ್‌ ಗಡಿ ಪ್ರದೇಶದಲ್ಲಿ ಭಾರತ–ಚೀನಾ ಸೇನಾ ಪಡೆಗಳ ಮಧ್ಯೆ ಸಂಘರ್ಷ ಹೆಚ್ಚಾಗಿರುವುದೂ ಚೀನಾ ಈ ನಿರ್ಧಾರ ಕೈಗೊಳ್ಳಲು ಕಾರಣವಿರಬಹುದು ಎನ್ನಲಾಗುತ್ತಿದೆ. ಆದರೆ, ಚೀನಾ ರಾಯಭಾರ ಕಚೇರಿಯ ನೋಟಿಸ್‌ನಲ್ಲಿ ಈ ವಿಚಾರ ಉಲ್ಲೇಖವಾಗಿಲ್ಲ.

ಭಾರತದಿಂದ ವಾಪಸಾಗುವವರು ವಿಮಾನಯಾನ ವೆಚ್ಚ ಭರಿಸಬೇಕು. 14 ದಿನಗಳ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ರಾಯಭಾರ ಕಚೇರಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕೊರೊನಾ ಸೋಂಕಿನ ಲಕ್ಷಣ ಇರುವವರಿಗೆ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ ಎಂದೂ ಹೇಳಲಾಗಿದೆ.

ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಾಗಿರುವ ಅಗ್ರ ಹತ್ತು ರಾಷ್ಟ್ರಗಳ ಪಟ್ಟಿ ಸೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.