ADVERTISEMENT

ಕೋವಿಡ್‌–19 ಈಗ ಜಾಗತಿಕ ಆರೋಗ್ಯ ತುರ್ತು ಅಲ್ಲ: ವಿಶ್ವ ಆರೋಗ್ಯ ಸಂಸ್ಥೆ

​ಪ್ರಜಾವಾಣಿ ವಾರ್ತೆ
Published 5 ಮೇ 2023, 17:08 IST
Last Updated 5 ಮೇ 2023, 17:08 IST
   

ವಿಶ್ವಸಂಸ್ಥೆ/ಜಿನೀವಾ: ‘ಕೋವಿಡ್‌–19 ಈಗ ಜಾಗತಿಕ ಆರೋಗ್ಯ ತುರ್ತು ಸ್ಥಿತಿ’ಯಾಗಿ ಉಳಿದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ. ಜಗತ್ತಿನಾದ್ಯಂತ 70 ಲಕ್ಷ ಜನರ ಪ್ರಾಣ ತೆಗೆದಿದ್ದ ಈ ರೋಗವು, ಎಲ್ಲ ದೇಶಗಳನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿತ್ತು.

‘ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಆರೋಗ್ಯ ನಿಯಮಾವಳಿ (2005) ತುರ್ತು ಸಮಿತಿಯು ಗುರುವಾರ 15ನೇ ಬಾರಿಗೆ ಸಭೆ ಸೇರಿತ್ತು. ಈ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್‌ ಅವರು ತಿಳಿಸಿದರು.

‘ನಾನು ಈ ಶಿಫಾರಸನ್ನು ಒಪ್ಪಿಕೊಂಡಿದ್ದೇನೆ. ಕೋವಿಡ್‌–19 ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂಬ ಪರಿಗಣನೆಯನ್ನು ಈಗ ಕೈಬಿಡಲಾಗಿದೆ. ಆದರೆ, ಇದರ ಅರ್ಥ ಈ ಪಿಡುಗು ಅಂತ್ಯಗೊಂಡಿದೆ ಎಂದಲ್ಲ’ ಎಂದು ಎಚ್ಚರಿಸಿದರು.

ADVERTISEMENT

ಕೋವಿಡ್‌–19ರಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಇಳಿಕೆ, ಕೊರೊನಾ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾಗುತ್ತಿರುವವರು ಹಾಗೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿ ಇಳಿಕೆ ಮತ್ತು ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಸಮಿತಿಯು ಈ ನಿರ್ಣಯ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.