ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣಾ ಕಣ ರಂಗೇರುತ್ತಿದ್ದು, ಹಾಲಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಚುನಾವಣಾ ಪ್ರಚಾರದಲ್ಲಿ ಹಿಂದೂ ಸಮುದಾಯದವರನ್ನು ಆಕರ್ಷಿಸುವ ಪ್ರಯತ್ನದಲ್ಲಿದ್ದಾರೆ.
ಈ ರಾಜಕೀಯ ನಾಯಕರು ಹಿಂದೆಂದಿಗಿಂತಲೂ ಹೆಚ್ಚಾಗಿಅಮೆರಿಕದ ಒಟ್ಟು ಜನಸಂಖ್ಯೆಯಲ್ಲಿ (2016ರ ಪ್ರಕಾರ) ಶೇ 1ರಷ್ಟಿರುವ ಹಿಂದೂ ಸಮುದಾಯವರನ್ನು ಓಲೈಸುವ ಪ್ರಯತ್ನದಲ್ಲಿದ್ದಾರೆ.
’ನಮ್ಮ ಪಕ್ಷವನ್ನು ಪುನರಾಯ್ಕೆ ಮಾಡಿದರೆ, ಅಮೆರಿಕದಲ್ಲಿ ಹಿಂದೂಗಳಿಗೆ ಧಾರ್ಮಿಕ ಸ್ವಾತಂತ್ರ್ಯಕ್ಕಿರುವ ಅಡೆತಡೆಗಳನ್ನು ನಿವಾರಿಸುತ್ತೇವೆ’ ಎಂದು ಟ್ರಂಪ್ ಪರ ಚುನಾವಣಾ ಪ್ರಚಾರ ನಡೆಸುತ್ತಿರುವವರು ಭರವಸೆ ನೀಡಿದರೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಪರ ಪ್ರಚಾರಕರು ’ಹಿಂದೂಗಳ ನಂಬಿಕೆಗೆ ಆದ್ಯತೆ ನೀಡುತ್ತೇವೆ’ ಎಂದು ಹೇಳುತ್ತಿದ್ದಾರೆ.
ಈ ನಡುವೆ ಜೋ ಬೈಡೆನ್ ನೇತೃತ್ವದ ಡೆಮಾಕ್ರಟಿಕ್ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಅಮೆರಿಕದಲ್ಲಿರುವ ಹಿಂದೂ ಸಮುದಾಯದ ಪ್ರಮುಖ ನಾಯಕಿ ನೀಲಿಮಾ ಗೋಣುಗುಂಟ್ಲಾ ಅವರು ಭಾಗವಹಿಸಿದ್ದರು. ಇದು ಬೈಡನ್ ಪಕ್ಷದಲ್ಲಿ ಹಿಂದೂ ಸಮುದಾಯದ ಬೆಂಬಲವನ್ನು ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.