ಡೊನಾಲ್ಡ್ ಟ್ರಂಪ್
– ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ಒತ್ತಡ ಹೇರುವ ಕಾರ್ಯತಂತ್ರದ ಭಾಗವಾಗಿ ಚೀನಾ ಮತ್ತು ಭಾರತದ ಮೇಲೆ ಶೇ 100ರಷ್ಟು ಸುಂಕ ವಿಧಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುರೋಪಿಯನ್ ಒಕ್ಕೂಟವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
ಈ ವಿಚಾರವನ್ನು ಅಮೆರಿಕದ ಅಧಿಕಾರಿಯೊಬ್ಬರು ಮತ್ತು ಯುರೋಪಿಯನ್ ಒಕ್ಕೂಟದ ರಾಜತಾಂತ್ರಿಕರೊಬ್ಬರು ದೃಢಪಡಿಸಿದ್ದಾರೆ.
‘ಚೀನಾ ಮತ್ತು ಭಾರತವು ರಷ್ಯಾದ ಪ್ರಮುಖ ತೈಲ ಖರೀದಿ ರಾಷ್ಟ್ರಗಳಾಗಿವೆ. 2022ರಿಂದ ಉಕ್ರೇನ್ ಮೇಲೆ ರಷ್ಯಾ ನಿರಂತರವಾಗಿ ದಾಳಿ ಮಾಡುತ್ತಲೇ ಬರುತ್ತಿದೆ. ರಷ್ಯಾದ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಚೀನಾ ಮತ್ತು ಭಾರತ ಪ್ರಮುಖ ಪಾತ್ರವಹಿಸುತ್ತಿವೆ’ ಎಂದು ಟ್ರಂಪ್ ಅಭಿಪ್ರಾಯಪಟ್ಟಿರುವುದಾಗಿ ಅವರು ಹೇಳಿದ್ದಾರೆ.
ಚೀನಾ, ಭಾರತದ ಮೇಲೆ ಸುಂಕ ವಿಧಿಸುವ ಕುರಿತು ಟ್ರಂಪ್ ಅವರು ಯುರೋಪಿಯನ್ ಒಕ್ಕೂಟದ ರಾಯಭಾರಿ ಡೇವಿಡ್ ಸುಲ್ಲಿವಾನ್ ಮತ್ತು ಇತರ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಯುರೋಪಿಯನ್ ಒಕ್ಕೂಟವು ಅಮೆರಿಕದ ವಿನಂತಿಯನ್ನು ಆಲಿಸಿದರೆ, ಅಮೆರಿಕವು ಇದೇ ರೀತಿಯ ಸುಂಕಗಳನ್ನು ವಿಧಿಸಲು ಸಿದ್ಧವಿರುವುದಾಗಿಯೂ ಟ್ರಂಪ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣಕ್ಕೆ ಟ್ರಂಪ್ ಭಾರತದ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ್ದರು. ಇದರಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.