ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿ ಬಳಿಕ ಭಾರತ–ಪಾಕಿಸ್ತಾನ ನಡುವೆ ಏರ್ಪಟ್ಟ ಸಂಘರ್ಷದ ವೇಳೆ ಐದು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಕದನ ವಿರಾಮ ಘೋಷಣೆ ಬಳಿಕ ಪರಿಸ್ಧಿತಿ ತಿಳಿಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ.
ಶ್ವೇತಭವನದಲ್ಲಿ ರಿಪಬ್ಲಿಕನ್ ಪಕ್ಷದ ಶಾಸಕರಿಗೆ ಏರ್ಪಡಿಸಿದ್ದ ಔತಣಕೂಟದ ಸಂದರ್ಭದಲ್ಲಿ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಆದರೆ, ಹೊಡೆದುರುಳಿಸಲಾಗಿರುವ ಯುದ್ಧ ವಿಮಾನಗಳು ಯಾವ ದೇಶದವು ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಗುಂಡಿನ ದಾಳಿ ನಡೆದಿತ್ತು. ಉಗ್ರರ ದಾಳಿ ವೇಳೆ 26 ಪ್ರವಾಸಿಗರು ಹತ್ಯೆಯಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್ ಸಿಂಧೂರ' ನಡೆಸಿದ್ದವು.
ಅದರ ಬೆನ್ನಲ್ಲೇ, ಪಾಕಿಸ್ತಾನ ಸೇನೆ ಭಾರತದ ನಾಗರಿಕರು ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್ ಹಾಗೂ ಕ್ಷಿಪಣಿ ದಾಳಿ ನಡೆಸಿತ್ತು. ಆ ಪ್ರಯತ್ನಗಳನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸಿತ್ತು. ಇದರಿಂದಾಗಿ, ಉಭಯ ರಾಷ್ಟ್ರಗಳ ನಡುವೆ ಯುದ್ಧದ ಆತಂಕ ಸೃಷ್ಟಿಯಾಗಿತ್ತು.
ಸಂಘರ್ಷದ ಕುರಿತು ಮಾತನಾಡಿರುವ ಟ್ರಂಪ್, 'ವಾಸ್ತವವಾಗಿ, ಹಾರಾಟದ ಸಂದರ್ಭದಲ್ಲೇ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ನಾಲ್ಕು ಅಥವಾ ಐದು ಇರಬಹುದು. ಆದರೆ, ಐದು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ನಾನು ಭಾವಿಸುತ್ತೇನೆ' ಎಂದು ಹೇಳಿದ್ದಾರೆ. ಆದರೆ, ಅವರು ಹೆಚ್ಚಿನ ವಿವರ ನೀಡಿಲ್ಲ.
ಭಾರತದ ಐದು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ಉಭಯ ದೇಶಗಳ ನಡುವೆ ಮೇ 10ರಂದು ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ. ಆದರೆ, ಅದನ್ನು ಟ್ರಂಪ್ ಅವರು ಮೊದಲು ಘೋಷಣೆ ಮಾಡಿದ್ದರು.
ಮೂರನೇ ರಾಷ್ಟ್ರದ ಮಧ್ಯಸ್ಥಿಕೆಯನ್ನು ಭಾರತ ಸ್ಪಷ್ಟವಾಗಿ ಅಲ್ಲಗಳೆದಿದೆ. ಆದರೂ, ಸಂಘರ್ಷ ತಪ್ಪಿಸುವಲ್ಲಿ ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಪದೇ ಪದೇ ಹೇಳಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.