
ಆಂಥೊನಿ ಅಲ್ಬನೀಸ್ ಮತ್ತು ನರೇಂದ್ರ ಮೋದಿ
(ಚಿತ್ರ ಕೃಪೆ: X/@narendramodi)
ಜೊಹಾನಸ್‌ಬರ್ಗ್: ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಆಂಥೊನಿ ಅಲ್ಬನೀಸ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
‘ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರೊಂದಿಗೆ ಉತ್ತಮ ಸಭೆ ನಡೆಯಿತು. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕಾರ್ಯತಂತ್ರದ ಪಾಲುದಾರಿಕೆ 5 ವರ್ಷಗಳನ್ನು ಪೂರ್ಣಗೊಳಿಸಿದೆ. ಮುಂದಿನ ಹಲವು ವರ್ಷಗಳ ಕಾಲ ಉಭಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಇನ್ನಷ್ಟು ಬಲಪಡಿಸಲು ಪರಿವರ್ತನಾತ್ಮಕ ಫಲಿತಾಂಶಗಳು ಸಾಕ್ಷಿಯಾಗಿವೆ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಇಂದಿನ ಸಭೆಯಲ್ಲಿ ಮೂರು ಪ್ರಮುಖ ಕ್ಷೇತ್ರಗಳಾದ ರಕ್ಷಣೆ ಮತ್ತು ಭದ್ರತೆ, ಪರಮಾಣು ಶಕ್ತಿ ಮತ್ತು ವ್ಯಾಪಾರ–ಹೂಡಿಕೆ ಬಗ್ಗೆ ಮಾತುಕತೆ ನಡೆಸಲಾಯಿತು. ಹಾಗೆಯೇ ಶಿಕ್ಷಣ ಸೇರಿದಂತೆ ಇತರೆ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು. ಇದರಿಂದಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ’ ಎಂದೂ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ದೆಹಲಿಯ ಕೆಂಪುಕೋಟೆ ಬಳಿ ನಡೆದ ಭಯೋತ್ಪಾದಕ ದಾಳಿ ಮತ್ತು ಸೌದಿ ಅರೇಬಿಯಾದಲ್ಲಿ ನಡೆದ ಬಸ್ ಅಪಘಾತದಲ್ಲಿ ಹಲವರು ಭಾರತೀಯರು ಮೃತಪಟ್ಟಿರುವ ಕುರಿತು ಅಲ್ಬನೀಸ್ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಗೌಟೆಂಗ್‌ನ ವಾಟರ್‌ಕ್ಲೂಫ್‌ನಲ್ಲಿರುವ ವಾಯುನೆಲೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು, ಸಾಂಸ್ಕೃತಿಕ ಹಾಡು ಮತ್ತು ನೃತ್ಯದ ಮೂಲಕ ಕಲಾವಿದರು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದಾರೆ. ಆಫ್ರಿಕಾದಲ್ಲಿ ನಡೆಯುತ್ತಿರುವ ಮೊದಲ ಜಿ–20 ಶೃಂಗಸಭೆ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.