
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಕೃಪೆ: ಪಿಟಿಐ
ನ್ಯೂಯಾರ್ಕ್/ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ಯುದ್ಧ ಸೇರಿದಂತೆ ಇದುವರೆಗೆ ಎಂಟು ಕದನಗಳನ್ನು ನಿಲ್ಲಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಪುನರುಚ್ಚರಿಸಿದ್ದಾರೆ.
ಸೌದಿ ಅರೇಬಿಯಾದ ರಾಜಕುಮಾರ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಶ್ವೇತಭವನದ ಓವಲ್ ಕಚೇರಿಯಲ್ಲಿ ನಡೆದ ದ್ವಿಪಕ್ಷೀಯ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಟ್ರಂಪ್ ಈ ಹೇಳೀಕೆ ನೀಡಿದ್ದಾರೆ.
'ನಾನು ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಮತ್ತೊಂದು (ರಷ್ಯಾ–ಉಕ್ರೇನ್ ಯುದ್ಧ) ಬಾಕಿ ಇದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿಚಾರದಲ್ಲಿ ಸ್ವಲ್ಪ ಅಚ್ಚರಿಯಾಗುತ್ತಿದೆ. ನಾನು ಅಂದುಕೊಂಡದ್ದಕ್ಕಿಂತಲೂ ಹೆಚ್ಚು ಸಮಯ ಹಿಡಿದಿದೆ. ಆದರೆ, ನಾವು ಭಾರತ ಮತ್ತು ಪಾಕಿಸ್ತಾನ ಕದನವನ್ನು ನಿಲ್ಲಿಸಿದ್ದೇವೆ' ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಏಪ್ರಿಲ್ 22 ರಂದು ನಡೆಸಿದ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರು ಹತ್ಯೆಯಾಗಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ಪಡೆಗಳು ಮೇ 7ರಂದು ದಾಳಿ ನಡೆಸಿದ್ದವು.
ಇದರ ಬೆನ್ನಲ್ಲೇ, ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ಏರ್ಪಟ್ಟಿತ್ತು. ಆದರೆ, ಮೇ 10ರಂದು ಕದನ ವಿರಾಮ ಘೋಷಣೆಯಾಗಿತ್ತು.
ಈ ಕುರಿತು, ಟ್ರಂಪ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಅದಾದ ನಂತರ, ಉಭಯ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹಲವು ಬಾರಿ ಹೇಳಿಕೊಂಡಿದ್ದಾರೆ. ಆದರೆ, ಭಾರತವು ಮೂರನೇ ರಾಷ್ಟ್ರದ ಮಧ್ಯಸ್ಥಿಕೆ ವಿಚಾರವನ್ನು ನಿರಂತರವಾಗಿ ತಳ್ಳಿಹಾಕುತ್ತಾ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.