ರಣಧೀರ್ ಜೈಸ್ವಾಲ್
(ಚಿತ್ರ ಕೃಪೆ: X/@MEAIndia)
ನವದೆಹಲಿ: ಪಶ್ಚಿಮ ಬಂಗಾಳದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಧಿಕಾರಿಗಳ ಹೇಳಿಕೆಗಳನ್ನು ಭಾರತ ಇಂದು (ಶುಕ್ರವಾರ) ತಿರಸ್ಕರಿಸಿದೆ.
ಬಾಂಗ್ಲಾದೇಶ ಸಾರ್ವಜನಿಕ ಅಭಿಪ್ರಾಯ ಉಲ್ಲೇಖಿಸುವ ಮೊದಲು ತನ್ನದೇ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯತ್ತ ಗಮನಹರಿಸಬೇಕು ಎಂದು ಭಾರತ ತಿರುಗೇಟು ನೀಡಿದೆ.
'ಪಶ್ಚಿಮ ಬಂಗಾಳದಲ್ಲಿನ ಘಟನೆಗಳಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಕಡೆಯಿಂದ ಬಂದ ಹೇಳಿಕೆಗಳನ್ನು ನಾವು ತಳ್ಳಿ ಹಾಕುತ್ತೇವೆ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಜೈಸ್ವಾಲ್, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಭಾರತದ ಕಳವಳಕ್ಕೆ ಪ್ರತಿಯಾಗಿ ನಮ್ಮ ದೇಶದ ಮೇಲೂ ಸಮಾನವಾದ ಆರೋಪವನ್ನು ಹೊರಿಸಿ ಗಮನ ಬೇರೆಡೆಗೆ ಸೆಳೆಯಲು ಯತ್ನಿಸಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡುವ ಬದಲು ಬಾಂಗ್ಲಾ ತನ್ನದೇ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಗಮನಹರಿಸುವುದು ಒಳಿತು' ಎಂದು ಅವರು ಹೇಳಿದ್ದಾರೆ.
ಬಂಗಾಳದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿದ್ದ ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ, ಅಲ್ಪಸಂಖ್ಯಾತರ ರಕ್ಷಣೆಗೆ ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.
'ಅಲ್ಪಸಂಖ್ಯಾತ ಮುಸ್ಲಿಮರ ರಕ್ಷಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳುವಂತೆ ಭಾರತ ಹಾಗೂ ಪಶ್ಚಿಮ ಬಂಗಾಳ ಸರ್ಕಾರವನ್ನು ಒತ್ತಾಯಿಸುತ್ತೇವೆ' ಎಂದು ಅವರು ಹೇಳಿಕೆ ನೀಡಿದ್ದರು.
ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ವ್ಯಾಪಕ ಹಿಂಸಾಚಾರ ವರದಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.