ADVERTISEMENT

ಶ್ರೀಲಂಕಾ ಅಧ್ಯಕ್ಷರ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ: ಭಾರತೀಯ ಹೈಕಮಿಷನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2022, 10:02 IST
Last Updated 20 ಜುಲೈ 2022, 10:02 IST
   

ಕೊಲಂಬೊ: ಶ್ರೀಲಂಕಾದಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ಮಾಡಿದೆ ಎಂಬ ಮಾಧ್ಯಮ ವರದಿಗಳನ್ನು ಶ್ರೀಲಂಕಾದ ಭಾರತೀಯ ಹೈಕಮಿಷನ್ ನಿರಾಕರಿಸಿದೆ. ಅಲ್ಲದೆ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಲ್ಲದೆ ಇನ್ನೊಂದು ದೇಶದ ಆಂತರಿಕ ವ್ಯವಹಾರ ಹಾಗೂ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಭಾರತ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪುನರುಚ್ಚರಿಸಿದೆ.

ಶ್ರೀಲಂಕಾದ ಸಂಸತ್ತಿನಲ್ಲಿ ಅಧ್ಯಕ್ಷರ ಆಯ್ಕೆಗೆ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಲಂಕಾದ ನಾಯಕರ ಮೇಲೆ ಪ್ರಭಾವ ಬೀರಲು ಭಾರತ ರಾಜಕೀಯ ಮಟ್ಟದಲ್ಲಿ ಪ್ರಯತ್ನ ನಡೆಸಿದೆ ಎಂಬ ಆರೋಪಗಳು ಆಧಾರರಹಿತವಾಗಿದೆ ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.

ಈ ಮಾಧ್ಯಮ ವರದಿಗಳು ಸುಳ್ಳಾಗಿದ್ದು, ಸ್ಪಷ್ಟವಾಗಿ ನಿರಾಕರಿಸುತ್ತೇವೆ ಎಂದು ತಿಳಿಸಿದೆ.

ಪ್ರಜಾಸತ್ತಾತ್ಮಕ ಮೌಲ್ಯದಿಂದ ಸ್ಥಾಪಿತ ಸಂಸ್ಥೆ ಹಾಗೂ ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ಶ್ರೀಲಂಕಾದ ಜನರ ಆಕಾಂಕ್ಷೆಗಳನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.