ವಿಶ್ವಸಂಸ್ಥೆ: ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಚೋದಿಸುವ ದೇಶಗಳ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರತಿಪಾದಿಸಿದ ಭಾರತ, ನೆರೆಯ ಪಾಕಿಸ್ತಾನವನ್ನು ‘ಮತಾಂಧ’, ‘ಸರಣಿ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶ’ ಎಂದು ಟೀಕಿಸಿದೆ.
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಈ ರೀತಿ ವಾದ ಮಂಡಿಸಿದೆ.
ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿರುವ ಪರ್ವತನೇನಿ ಹರೀಶ್, ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ಕುರಿತು ಚರ್ಚಿಸುವಾಗ, ಕೆಲ ಮೂಲಭೂತ ತತ್ವಗಳನ್ನು ಗುರುತಿಸುವುದು ಅಗತ್ಯವಾಗಿದೆ. ಅವುಗಳಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುವಾಗಿರುವುದೂ ಮುಖ್ಯವಾಗಿದೆ ಎಂದು ಹೇಳಿದರು.
‘ಒಂದೆಡೆ, ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಪ್ರಬುದ್ಧ ಪ್ರಜಾಪ್ರಭುತ್ವ, ವೃದ್ಧಿಸುತ್ತಿರುವ ಆರ್ಥಿಕತೆ, ಬಹುತ್ವ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜದೊಂದಿಗೆ ಮುನ್ನುಗುತ್ತಿದೆ. ಆದರೆ ಮತ್ತೊಂದೆಡೆ, ಪಾಕಿಸ್ತಾನವು ಮತಾಂಧತೆ, ಭಯೋತ್ಪಾದನೆಯಲ್ಲಿ ಮುಳುಗಿದೆ. ಅಲ್ಲದೆ, ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) ಸರಣಿ ಸಾಲಗಾರನಾಗಿಬಿಟ್ಟಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.