ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಭಾರತ ಕೊಳಕು’ ಎಂದು ಕರೆದಿದ್ದಾರೆ. ಟ್ರಂಪ್ ಅವರ ಈ ಹೇಳಿಕೆ ಬಗ್ಗೆ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿವೆ.
ಅಮೆರಿಕದ ಅದ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಎದುರಾಳಿ ಜೊ ಬೈಡನ್ ಜತೆಗಿನ ಅಂತಿಮ ಚರ್ಚೆಯ ವೇಳೆ ಟ್ರಂಪ್ ಅವರು ಈ ಮಾತು ಹೇಳಿದ್ದರು. ಅಮೆರಿಕದಲ್ಲಿ ಗಾಳಿಯ ಗುಣಮಟ್ಟದ ಬಗ್ಗೆ ಮಾತನಾಡುತ್ತಾ ಟ್ರಂಪ್ ಅವರು, 'ಭಾರತವನ್ನು ನೋಡಿ. ಅದು ಕೊಳಕು. ಅಲ್ಲಿನ ಗಾಳಿ ಕೊಳಕು' ಎಂದು ಹೇಳಿದ್ದರು.
‘ವಾಯುಮಾಲಿನ್ಯವನ್ನು ತಗ್ಗಿಸಲು ಭಾರತ, ಚೀನಾ ಮತ್ತು ರಷ್ಯಾ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ಟ್ರಂಪ್ ಜರೆದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಅವರು, 'ಹೌದು, ಟ್ರಂಪ್ ಹೇಳಿರುವುದು ಸರಿಯಾಗಿಯೇ ಇದೆ. ದೆಹಲಿಯಲ್ಲಿ ವಾಯುಮಾಲಿನ್ಯವಿದೆ. ಅದನ್ನು ನಾವು ಸರಿಪಡಿಸಬೇಕಿದೆ’ ಎಂದು ಹೇಳಿದರು. ಆನಂತರ ಭಾರತದಲ್ಲಿ ಗಾಳಿಯ ಗುಣಮಟ್ಟ ಹೆಚ್ಚಿಸಬೇಕು ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.
ಆದರೆ, ಟ್ರಂಪ್ ಅವರು ಭಾರತವನ್ನು ಕೊಳಕು ಎಂದು ಕರೆದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ‘ಟ್ರಂಪ್ ಅವರು ಭಾರತವನ್ನು ಕೊಳಕು ಎಂದು ಕರೆದಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿರುವುದು ಏಕೆ’ ಎಂದು ಕಾಂಗ್ರೆಸ್‌ನ ಹಲವು ಕಾರ್ಯಕರ್ತರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.