
ಮೊಹಮ್ಮದ್ ಯೂನಸ್
ಢಾಕಾ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನಿರ್ಗಮಿತ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರು ಹೊಸ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುನ್ನದಿನವಾದ ಸೋಮವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಸೇರಿದಂತೆ ಸೇನಾ ಮುಖ್ಯಸ್ಥರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಮೊಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಧಿಕಾರಾವಧಿ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲರೊಂದಿಗೂ ಫೋಟೊ ಕ್ಲಿಕ್ಕಿಸಿಕೊಂಡರು. ಬಳಿಕ ಸೇನಾ ಮುಖ್ಯಸ್ಥ ವಕಾರ್–ಉಝ್–ಝಮಾನ್ ಅವರನ್ನು ಭೇಟಿಯಾಗಿ ಸಾರ್ವತ್ರಿಕ ಚುನಾವಣೆ ವೇಳೆ ಸಹಕರಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.
ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ 60 ವರ್ಷದ ತಾರಿಕ್ ರೆಹಮಾನ್ ಅವರು ನಾಳೆ (ಮಂಗಳವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೇಶದ ಇತಿಹಾಸದಲ್ಲಿ 35 ವರ್ಷಗಳ ಬಳಿಕ ಮೊದಲ ಬಾರಿಗೆ ಪುರುಷರೊಬ್ಬರು ಪ್ರಧಾನಿಯಾಗುತ್ತಿದ್ದಾರೆ.
ಫೆಬ್ರುವರಿ 12ರಂದು ನಡೆದ ನಿರ್ಣಾಯಕ 13ನೇ ಸಂಸತ್ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ಅವರ ನೇತೃತ್ವದ ಬಾಂಗ್ಲಾದೇಶದ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) 297 ಸ್ಥಾನಗಳಲ್ಲಿ 212 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಮತ್ತು ಭಾರತದ ನಡುವಿನ ಸಂಬಂಧ ಸಂಪೂರ್ಣವಾಗಿ ಹದಗೆಟ್ಟಿತ್ತು. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರು, ಹಿಂದೂಗಳ ಮೇಲಿನ ದಾಳಿಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿತ್ತು. ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯ ನಂತರ ಸಮುದಾಯವು ಸರಣಿ ದಾಳಿಗಳನ್ನು ಎದುರಿಸಿದೆ, ಅವುಗಳಲ್ಲಿ ಕೆಲವು ಮಾರಕವೂ ಆಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.