ನೇಪಾಳದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ
-ರಾಯಿಟರ್ಸ್ ಚಿತ್ರ
ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡುವಂತೆ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿಸಿದ್ದು, ಹಿಂಸಾಚಾರಕ್ಕೆ ತಿರುಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಿಪಿಎನ್-ಎಂಸಿ ಅಧ್ಯಕ್ಷೆ ಪುಷ್ಪಾ ಕಮಲ್ ದಹಾಲ್, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪೃಥ್ವಿ ಸುಬ್ಬಾ ಗುರುಂಗ್, ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಸೇರಿದಂತೆ ಇತರರ ಮನೆಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಕಠ್ಮಂಡು ಸೇರಿದಂತೆ ನೇಪಾಳದ ಹಲವು ನಗರಗಳಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಆದರೆ, ಪ್ರತಿಭಟನಾಕಾರರು ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ರಾಜಕೀಯ ನಾಯಕರ ಮನೆಗಳು, ನೇಪಾಳಿ ಕಾಂಗ್ರೆಸ್ ಮತ್ತು ಸಿಪಿಎನ್-ಯುಎಂಎಲ್ ಪಕ್ಷಗಳ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಂಧಲೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ವಪಕ್ಷ ಸಭೆ ಕರೆದ ಓಲಿ
‘ದೇಶದ ಕಠಿಣ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಇಂದು ಸಂಜೆ 6 ಗಂಟೆಗೆ ನಾನು ಸರ್ವಪಕ್ಷ ಸಭೆಯನ್ನು ಕರೆದಿದ್ದೇನೆ. ಈ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಶಾಂತವಾಗಿರಲು ವಿನಂತಿಸುತ್ತೇನೆ’ ಎಂದು ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.