ಡೊನಾಲ್ಡ್ ಟ್ರಂಪ್
– ರಾಯಿಟರ್ಸ್
ನ್ಯೂಯಾರ್ಕ್: ‘ನಾವು ಪಾಕಿಸ್ತಾನದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಒಟ್ಟಿಗೆ ಕೆಲಸ ಮಾಡಲಿವೆ. ಪಾಕಿಸ್ತಾನವು ಮುಂದೊಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾರ್ಮಿಕವಾಗಿ ನುಡಿದಿದ್ದಾರೆ.
‘ಬೃಹತ್ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸಲು ಪಾಕಿಸ್ತಾನ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡಲಿವೆ. ಈ ಪಾಲುದಾರಿಕೆಯನ್ನು ಮುನ್ನಡೆಸುವ ತೈಲ ಕಂಪನಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಯಾರಿಗೆ ಗೊತ್ತು... ಭವಿಷ್ಯದಲ್ಲಿ ಪಾಕಿಸ್ತಾನದವರು ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು!’ ಎಂದು ಟ್ರಂಪ್ ಅವರು ‘ಟ್ರುಥ್ ಸೋಷಿಯಲ್’ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.
ಭಾರತದಿಂದ ಅಮೆರಿಕಕ್ಕೆ ಆಮದಾಗುವ ಎಲ್ಲ ಸರಕುಗಳ ಮೇಲೆ ಆಗಸ್ಟ್ 1ರಿಂದ ಶೇಕಡ 25ರಷ್ಟು ಸುಂಕ ವಿಧಿಸಲಾಗುತ್ತದೆ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಟ್ರಂಪ್, ಪಾಕ್ ಜತೆಗೆನ ಒಪ್ಪಂದ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ.
ಜಗತ್ತಿನ ಐದನೆಯ ಅತಿದೊಡ್ಡ ಅರ್ಥ ವ್ಯವಸ್ಥೆಯನ್ನು ಹೊಂದಿರುವ ಭಾರತವು ರಷ್ಯಾದಿಂದ ಶಸ್ತ್ರಾಸ್ತ್ರ ಮತ್ತು ಕಚ್ಚಾ ತೈಲ ಖರೀದಿಸುತ್ತಿರುವುದಕ್ಕಾಗಿ ಆಗಸ್ಟ್ 1ರಿಂದ ಒಂದಿಷ್ಟು ದಂಡವನ್ನು ಕೂಡ ತೆರಬೇಕಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಆದರೆ, ದಂಡದ ಕುರಿತಾಗಿ ಅವರು ಹೆಚ್ಚಿನ ವಿವರಣೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.