ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ಶಾಂಘೈನಲ್ಲಿ ಸಂತಾಪ
ಚಿತ್ರ: X / @IndiaInShanghai
ಬೀಜಿಂಗ್: ಚೀನಾದ ಶಾಂಘೈ ಮತ್ತು ಗುವಾಂಗ್‌ಜೌನಲ್ಲಿರುವ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಈ ವೇಳೆ ಅನಿವಾಸಿ ಭಾರತೀಯರೂ ರಾಜತಾಂತ್ರಿಕ ಅಧಿಕಾರಿಗಳಿಗೆ ಜೊತೆಯಾಗಿದ್ದಾರೆ.
ಶಾಂಘೈನಲ್ಲಿರುವ ರಾಯಭಾರ ಕಚೇರಿಯಲ್ಲಿ ಕಾನ್ಸುಲ್ ಜನರಲ್ ಪ್ರತೀಕ್ ಮಾಥುರ್ ಸೇರಿದಂತೆ ರಾಜತಾಂತ್ರಿಕ ಅಧಿಕಾರಿಗಳು, ಸಿಬ್ಬಂದಿ, ಸ್ನೇಹಿತರು, ಅನಿವಾಸಿ ಭಾರತೀಯರೊಂದಿಗೆ ಸೇರಿ ದುಃಖ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಇದೇ ರೀತಿ ಗುವಾಂಗ್‌ಜೌನಲ್ಲಿಯೂ ಸಂತಾಪ ಸಭೆ ನಡೆಸಲಾಗಿದೆ. ದಾಳಿಯಲ್ಲಿ ಮೃತಪಟ್ಟವರ ಚಿತ್ರಗಳನ್ನೂ ಈ ವೇಳೆ ಪ್ರದರ್ಶಿಸಲಾಗಿದೆ.
ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪದಲ್ಲಿರುವ ಪ್ರವಾಸಿ ಸ್ಥಳದಲ್ಲಿ ಏಪ್ರಿಲ್ 22ರಂದು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ, 26 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್–ಇ–ತಯಬಾ (ಎಲ್‌ಇಟಿ) ಸಂಘಟನೆಯ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.