ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಇದಕ್ಕೆ ಪರಿಹಾರೋಪಾಯವಾಗಿ ಸಂಧಾನ ಸಮಿತಿ ರಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ವೇಳೆ ನಡೆದ ಅಹಿತಕರ ಘಟನೆಗಳ ಕುರಿತು ಪಾರದರ್ಶಕ ತನಿಖೆ ನಡೆಸುವಂತೆ ಮತ್ತು ಪ್ರತಿಭಟನಕಾರರೊಂದಿಗೆ ಸಂಯಮ ಮತ್ತು ತಾಳ್ಮೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ.
ಪಾಕಿಸ್ತಾನದಲ್ಲಿ ನೆಲಸಿರುವ ಕಾಶ್ಮೀರಿ ನಿರಾಶ್ರಿತರಿಗೆ ವಿಧಾನಸಭೆಯಲ್ಲಿ ಮೀಸಲಿಟ್ಟಿರುವ 12 ಸ್ಥಾನ ಸ್ಥಾನಗಳನ್ನು ರದ್ದುಪಡಿಸುವುದು ಸೇರಿದಂತೆ 38 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಮ್ಮು ಕಾಶ್ಮೀರ ಜಂಟಿ ಅವಾಮಿ ಆ್ಯಕ್ಷನ್ ಕಮಿಟಿ (ಜೆಕೆಜೆಎಎಸಿ) ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಪ್ರತಿಭಟನೆ ನಡೆಯುತ್ತಿದೆ.
ಈ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ ಆರು ನಾಗರಿಕರು ಮತ್ತು ಮೂರು ಪೊಲೀಸರು ಮೃತಪಟ್ಟಿದ್ದಾರೆ. 172 ಪೊಲೀಸರಿಗೆ ಗಾಯಗಳಾಗಿದ್ದು, ಅದರಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 50 ನಾಗರಿಕರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.