ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಿಷೇಧಿತ ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಯೊಂದಿಗೆ ನಂಟು ಹೊಂದಿದ್ದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕಾರಕ್ ಜಿಲ್ಲೆಯ ಮೀರ್ ಕಲಾಂ ಬಾಂದಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಸಿಬ್ಬಂದಿ ಸೋಮವಾರ ಮಧ್ಯರಾತ್ರಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ಟಿಟಿಪಿ ಸಂಘಟನೆಯ ಕಾಕೀಮುಲ್ಲಾ ಗುಂಪಿನ ಐವರು ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಕಾಳಗದ ನಡುವೆಯೇ 9–10 ಉಗ್ರರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ಸ್ಥಳದಲ್ಲಿದ್ದ ಶಸ್ತ್ರಾಸ್ತ್ರಗಳು, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕೊಹತ್ ಜಿಲ್ಲೆಯಲ್ಲಿ ಬೀಡುಬಿಟ್ಟಿರಬಹುದಾದ ಉಗ್ರರನ್ನು ಸದೆಬಡಿಯಲು ಜಿಲ್ಲೆಯಾದ್ಯಂತ ಪೊಲೀಸರು ಮತ್ತು ಸಿಟಿಡಿ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.