
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ
ಪಿಟಿಐ ಚಿತ್ರ
ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಂಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ.
ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ. ಸದ್ಯಕ್ಕೆ ಯಾವುದೇ ಉಗ್ರ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತಿಕೊಂಡಿಲ್ಲ.
ಆದರೆ, ದಾಳಿಕೋರ ವಿದೇಶಿ ಪ್ರಜೆಯಾಗಿದ್ದು, ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ರಕ್ಷಣಾ ತಂಡಗಳು ಮತ್ತು ಪೊಲೀಸರು ದಾಳಿ ನಡೆದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ .
ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡದ ಬಳಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 12 ಜನರು ಮೃತಪಟ್ಟ ಮೂರು ತಿಂಗಳೊಳಗೆ ಈ ದಾಳಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.