ADVERTISEMENT

ಎರಡು ದಿನಗಳ ಭೇಟಿಗಾಗಿ ಜಪಾನ್ ತಲುಪಿದ ಪ್ರಧಾನಿ ಮೋದಿ

ಪಿಟಿಐ
Published 29 ಆಗಸ್ಟ್ 2025, 2:18 IST
Last Updated 29 ಆಗಸ್ಟ್ 2025, 2:18 IST
   

ಟೋಕಿಯೊ: ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಜಪಾನ್‌ನ ಟೋಕಿಯೊಗೆ ಆಗಮಿಸಿದ್ದಾರೆ.

ಈ ಭೇಟಿ ಸಮಯದಲ್ಲಿ ಅವರು ಜಪಾನ್ ಪ್ರಧಾನಿ ಶಿಗೆರು ಇಶಿಬಾ ಅವರೊಂದಿಗೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಟೋಕಿಯೊದಲ್ಲಿ ಇಳಿದಿದ್ದು, ಭಾರತ–ಜಪಾನ್ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಂದು ಸಂಜೆ ಜಪಾನ್ ಪ್ರಧಾನಿ ಶಿಗೆರು ಇಶಿಬಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ADVERTISEMENT

ತಮ್ಮ ನಿರ್ಗಮನದ ಹೇಳಿಕೆಯಲ್ಲಿ ಪ್ರಧಾನಿ ಮೋದಿ, ಜಪಾನ್ ಭೇಟಿಯು ಎರಡು ದೇಶಗಳ ನಡುವಿನ ನಾಗರಿಕ ಮತ್ತು ಸಾಂಸ್ಕೃತಿಕ ಒಪ್ಪಂದವನ್ನು ಬಲಪಡಿಸಲು ಒಂದು ಉತ್ತಮ ಅವಕಾಶವಾಗಿದೆ ಎಂದು ಹೇಳಿದ್ದಾರೆ.

‘ಕಳೆದ 11 ವರ್ಷಗಳಲ್ಲಿ ಸ್ಥಿರ ಮತ್ತು ಗಮನಾರ್ಹ ಪ್ರಗತಿಯನ್ನು ಸಾಧಿಸಿರುವ ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯಲ್ಲಿ ಮುಂದಿನ ಹಂತವನ್ನು ರೂಪಿಸುವತ್ತ ನಾವು ಗಮನಹರಿಸುತ್ತೇವೆ’ ಎಂದು ಮೋದಿ ಹೇಳಿದ್ದಾರೆ.

‘ನಮ್ಮ ಸಹಯೋಗವಮ್ಮು ಹೊಸ ಎತ್ತರಕ್ಕೆ ಕೊಂಡೊಯ್ಯಲು, ನಮ್ಮ ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸಲು ಹಾಗೂ ಎಐ ಮತ್ತು ಸೆಮಿಕಂಡಕ್ಟರ್‌ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ಪ್ರಯತ್ನಿಸುತ್ತೇವೆ’ಎಂದು ಅವರು ತಿಳಿಸಿದ್ದಾರೆ.

ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಟಿಯಾಂಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿ ಜಪಾನ್‌ನಿಂದ ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಪ್ರಯಾಣಿಸಲಿದ್ದಾರೆ.

‘ಜಪಾನ್ ಮತ್ತು ಚೀನಾಕ್ಕೆ ನನ್ನ ಭೇಟಿ ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳು ಹಾಗೂ ಆದ್ಯತೆಗಳನ್ನು ಮತ್ತಷ್ಟು ಹೆಚ್ಚಿಸುತ್ತವೆ. ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ, ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಮುನ್ನಡೆಸುವಲ್ಲಿ ಫಲಪ್ರದ ಸಹಕಾರವನ್ನು ನಿರ್ಮಿಸಲು ಸಹಕಾರಿಯಗಲಿದೆ ಎಂದು ನನಗೆ ವಿಶ್ವಾಸವಿದೆ’ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.