
ನರೇಂದ್ರ ಮೋದಿ, ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ
(ಸಂಗ್ರಹ ಚಿತ್ರ)
ನವದೆಹಲಿ: ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಉಭಯ ದೇಶಗಳ ನಾಯಕರು ದಕ್ಷಿಣ ಜಗತ್ತಿನ (ಗ್ಲೋಬಲ್ ಸೌತ್) ಹಿತಾಸಕ್ತಿಗಳನ್ನು ಕಾಪಾಡಲು ನಿಕಟ ಸಹಕಾರ ಅಗತ್ಯ ಎಂಬುದನ್ನು ಪ್ರತಿಪಾದಿಸಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿರುವ ಬ್ರೆಜಿಲ್ ಅಧ್ಯಕ್ಷರು ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರು ಸಮಾನ ಹಂಚಿಕೆಯ ಬಹುರಾಷ್ಟ್ರೀಯ ಸವಾಲುಗಳನ್ನು ಎದುರಿಸುವ ಮಹತ್ವವನ್ನು ಒತ್ತಿ ಹೇಳಿದರು ಎಂದು ಪ್ರಕಟಣೆ ತಿಳಿಸಿದೆ.
ಈ ಸಂದರ್ಭದಲ್ಲಿ ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಬರಮಾಡಿಕೊಳ್ಳಲು ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು.
'ಲುಲಾ ಅವರೊಂದಿಗೆ ಮಾತನಾಡಲು ಸಂತೋಷವಾಯಿತು. ಭಾರತ-ಬ್ರೆಜಿಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ವೇಗವನ್ನು ನಾವು ಪರಿಶೀಲಿಸಿದ್ದೇವೆ. ಇದು ಮುಂಬರುವ ವರ್ಷಗಳಲ್ಲಿ ಹೊಸ ಎತ್ತರವನ್ನು ತಲುಪಲಿದೆ. ಜಾಗತಿಕ ದಕ್ಷಿಣ ಹಿತಾಸಕ್ತಿಗಳನ್ನು ಮುನ್ನಡೆಸಲು ಉಭಯ ದೇಶಗಳ ನಡುವೆ ನಿಕಟ ಸಹಕಾರ ಅತ್ಯಗತ್ಯ. ಲುಲಾ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಬರಮಾಡಿಕೊಳ್ಳಲು ಎದುರು ನೋಡುತ್ತಿದ್ದೇನೆ' ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಳೆದ ವರ್ಷ ಜೊಹಾನಸ್‌ಬರ್ಗ್‌ನಲ್ಲಿ ಭಾರತ–ಬ್ರೆಜಿಲ್–ದಕ್ಷಿಣ ಆಫ್ರಿಕಾ (ಐಬಿಎಸ್‌ಎ) ನಾಯಕರ ಶೃಂಗಸಭೆಯ ವೇಳೆಯಲ್ಲಿ ಲುಲಾ ಅವರನ್ನು ಮೋದಿ ಭೇಟಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.