ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್
ವಾಷಿಂಗ್ಟನ್: ‘ಅಮೆರಿಕದ ಪರಮಾಣು ತಂತ್ರಜ್ಞಾನದಲ್ಲಿ ಹೂಡಿಕೆ ಮಾಡುವ ಮೂಲಕ ಭಾರತದ ಇಂಧನ ಮೂಲಗಳನ್ನು ವೈವಿಧ್ಯಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಹೇಗೆ ಸಹಾಯ ಮಾಡುತ್ತದೆ ಎಂಬುದರ ಕುರಿತು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆ ನಡೆಸಿದ್ದಾರೆ’ ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ಯಾರಿಸ್‌ನಲ್ಲಿ ಮಂಗಳವಾರ ನಡೆದ ‘ಎಐ ಆ್ಯಕ್ಷನ್’ ಶೃಂಗಸಭೆಯ ವೇಳೆ ವ್ಯಾನ್ಸ್ ಮತ್ತು ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮೋದಿ, ‘ವ್ಯಾನ್ಸ್ ಅವರೊಂದಿಗೆ ವಿವಿಧ ವಿಷಯಗಳ ಬಗ್ಗೆ ಉತ್ತಮ ಸಂಭಾಷಣೆ ನಡೆಸಲಾಯಿತು’ ಎಂದು ತಿಳಿಸಿದ್ದಾರೆ.
ಫೆ.13ರಂದು (ಗುರುವಾರ) ಪ್ರಧಾನಿ ಮೋದಿ ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ವಲಸೆ ನೀತಿಯಂತಹ ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸುವ ನಿರೀಕ್ಷೆಯಿದೆ.
‘ಇತ್ತೀಚೆಗೆ ಭಾರತ ತನ್ನ ಪರಮಾಣು ನೀತಿಯನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದ್ದು, ಹೆಚ್ಚು ಸುರಕ್ಷತಾ ವಲಯದಲ್ಲಿ ವಿದೇಶಿ ಮತ್ತು ಖಾಸಗಿ ಹೂಡಿಕೆಗಳನ್ನು ಉತ್ತೇಜಿಸುವುದಾಗಿ ಘೋಷಿಸಿತ್ತು. ಜಾಗತಿಕ ಮಟ್ಟದಲ್ಲಿ ಚೀನಾದ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕವು ಭಾರತದೊಂದಿಗೆ ಕೈಜೋಡಿಸುವ ಸಾಧ್ಯತೆ ಇದೆ’ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗ ಮೋದಿ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.