ಸಾಂದರ್ಭಿಕ ಚಿತ್ರ
ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಗಳಲ್ಲಿ ಕನಿಷ್ಠ ಏಳು ಮಂದಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಅಫ್ಗಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ಉತ್ತರ ವಾಝಿರಿಸ್ತಾನ್ ಜಿಲ್ಲೆಯ ಹಸನ್ ಖೇಲ್ ಪ್ರದೇಶದಲ್ಲಿ ಶನಿವಾರ ನಡೆದ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಬಾಂಬ್ ನಿಷ್ಕ್ರಿಯ ದಳವನ್ನು ಗುರಿಯಾಗಿಸಿಕೊಂಡು ಇರಿಸಲಾಗಿದ್ದ ಸುಧಾರಿತ ಸ್ಫೋಟಕವು ಶನಿವಾರ ಸ್ಫೋಟಿಸಿ ಈ ಸಾವು ನೋವು ಸಂಭವಿಸಿದೆ.
ಮತ್ತೊಂದು ಘಟನೆಯಲ್ಲಿ, ಅದೇ ಜಿಲ್ಲೆಯ ಸೀಮನ್ ಪ್ರದೇಶದಲ್ಲಿಯ ಸೇನಾ ನೆಲೆ ಮೇಲೆ ಉಗ್ರರು ದಾಳಿ ನಡೆಸಿ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಸಿಬ್ಬಂದಿ ಮೃತದೇಹಗಳನ್ನು ಮತ್ತು ಗಾಯಗೊಂಡ ಸಿಬ್ಬಂದಿಯನ್ನು ಬನ್ನುವಿನಲ್ಲಿರುವ ಸೇನಾ ಆಸ್ಪತ್ರೆಗೆ ಕಳಿಸಲಾಗಿದೆ. ದಾಳಿ ನಡೆದ ಸ್ಥಳಗಳಲ್ಲಿ ಭದ್ರತಾ ಪಡೆಗಳನ್ನು ಪಹರೆಕಾರ್ಯಕ್ಕೆ ನಿಯೋಜಿಸಲಾಗಿದೆ. ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನೂ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಈ ಜಿಲ್ಲೆಯ ಬಾಲಕಿಯರ ಶಾಲೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.