ಕಠ್ಮಂಡು: ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿ ಸುಶೀಲಾ ಕಾರ್ಕಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.
ನೇಪಾಳದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಾರ್ಕಿ, ವಿದೇಶದ ಮುಖ್ಯಸ್ಥರೊಂದಿಗೆ ನಡೆಸಿದ ಮೊದಲ ದೂರವಾಣಿ ಸಂಭಾಷಣೆ ಇದಾಗಿದೆ.
‘ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರ್ಕಿ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ’ ಎಂದು ನೇಪಾಳದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಸಂಭಾಷಣೆ ವೇಳೆ ಪ್ರಧಾನಿ ಕಾರ್ಕಿ ಅವರು ‘ಸಾರ್ವತ್ರಿಕ ಚುನಾವಣೆ ನಡೆಸುವುದು ಮಧ್ಯಂತರ ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿಯುತ್ತದೆ. ಜವಾಬ್ದಾರಿಯುತ, ಭ್ರಷ್ಟಾಚಾರ ಮುಕ್ತ ಮತ್ತು ಯುವ ಜನರ ಆಕಾಂಕ್ಷೆಗಳನ್ನು ಈಡೇರಿಸುವ ಆಡಳಿತ ನೀಡುವ ದೃಢನಿಶ್ಚಯ ಕೈಗೊಂಡಿದ್ದೇವೆ’ ಎಂದು ಮೋದಿ ಅವರಿಗೆ ತಿಳಿಸಿದ್ದಾರೆ.
ನೇಪಾಳ ಸರ್ಕಾರದ ಆದ್ಯತೆಗಳಿಗೆ ಅನುಗುಣವಾಗಿ ಭಾರತವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಮೋದಿ ಭರವಸೆ ನೀಡಿರುವುದಾಗಿ ಪ್ರಕಟಣೆ ತಿಳಿಸಿದೆ.
‘ಎರಡೂ ದೇಶಗಳ ಜನರ ಹಿತಾಸಕ್ತಿ ಕಾಪಾಡಲು ದ್ವಿಪಕ್ಷೀಯ ಸಹಕಾರ ಮತ್ತು ಪಾಲುದಾರಿಕೆಯನ್ನು ಮುಂದುವರಿಸಲು ಇಬ್ಬರೂ ಪ್ರಧಾನ ಮಂತ್ರಿಗಳು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ’ ಎಂದು ಹೇಳಿದೆ.
ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ‘ಜೆನ್–ಝಿ’ ಪ್ರತಿಭಟನೆಯಿಂದಾಗಿ ರಾಜೀನಾಮೆ ನೀಡಿದ್ದರು. ಆ ಬಳಿಕ ನೇಪಾಳದಲ್ಲಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 73 ವರ್ಷದ ಸುಶೀಲಾ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.