ಕೀವ್: ‘ಶಾಂತಿ ಸ್ಥಾಪನೆಗೆ ಇಡೀ ವಿಶ್ವವೇ ರಷ್ಯಾದ ಮೇಲೆ ಒತ್ತಡ ಹೇರಬೇಕು’ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಮನವಿ ಮಾಡಿದ್ದಾರೆ.
ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿರುವ ರಷ್ಯಾದ ಕ್ರಮವನ್ನು ಅವರು ಖಂಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಮತ್ತು ಮಿತ್ರರಾಷ್ಟ್ರಗಳು ಮೈತ್ರಿಕೂಟ ನಿರ್ಮಿಸುತ್ತಿವೆ’ ಎಂದು ಹೇಳಿದ್ದಾರೆ.
‘ಯುಎಸ್, ಬ್ರಿಟನ್, ಜರ್ಮನಿ ಮತ್ತು ಪೋಲೆಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ ನಾವು ಪುಟಿನ್ ವಿರೋಧಿ ಒಕ್ಕೂಟವನ್ನು ನಿರ್ಮಿಸುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಣೆ ಮಾಡಿದ್ದಾರೆ.
ರಷ್ಯಾ ಕ್ರಮವನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.