ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ
-ಪಿಟಿಐ ಚಿತ್ರ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಶ್ವೇತಭವನ ಮಾಹಿತಿ ನೀಡಿದೆ.
ಭಾರತೀಯ ಕಾಲಮಾನ ನಾಳೆ (ಶುಕ್ರವಾರ) ನಸುಕಿನ ವೇಳೆ 3.30ಕ್ಕೆ ಉಭಯ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
2023ರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಮೋದಿ ಪತ್ರಿಕಾಗೋಷ್ಠಿ ನಡೆಸಿದ್ದರು. ಆದರೆ, 2014ರಲ್ಲಿ ಮೋದಿ ಭಾರತದ ಪ್ರಧಾನಿಯಾದ ಬಳಿಕ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸಿಲ್ಲ. 2019ರ ಮೇನಲ್ಲಿ ಮೋದಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ, ಯಾವುದೇ ಪ್ರಶ್ನೆಗಳಿಗೆ ಉತ್ತರಿಸಿರಲಿಲ್ಲ.
ನರೇಂದ್ರ ಮೋದಿ ಅವರು ಡೊನಾಲ್ಡ್ ಟ್ರಂಪ್ ಜೊತೆ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ವಲಸೆಯಂತಹ ವಿಚಾರಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ಭಾರತ ಹಾಗೂ ಅಮೆರಿಕ ನಡುವಣ ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ.
ಬೈಡನ್ ಜತೆಗಿನ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಮೋದಿ, ಭಾರತದಲ್ಲಿ ಧಾರ್ಮಿಕ ತಾರತಮ್ಯ ಇಲ್ಲ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಪ್ರಶ್ನೆ ಕೇಳಿದ ಪತ್ರಕರ್ತನ ಮೇಲೆ ಮೋದಿ ಬೆಂಬಲಿಗರು ಆನ್‌ಲೈನ್‌ನಲ್ಲಿ ದಾಳಿ ನಡೆಸಿದ್ದರು. ಬೈಡನ್ ಆಡಳಿತವು ದಾಳಿಯನ್ನು ಖಂಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.