ಡೊನಾಲ್ಡ್ ಟ್ರಂಪ್
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ತಮ್ಮನ್ನು ಪರಿಚಯಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಚಿತ್ರವನ್ನು ತಮ್ಮದೇ ಒಡೆತನದ ‘ಟ್ರುತ್ ಸೋಷಿಯಲ್’ನಲ್ಲಿ ಹಂಚಿಕೊಂಡಿದ್ದಾರೆ.
‘ಟ್ರುತ್ ಸೋಷಿಯಲ್’ನಲ್ಲಿ ಭಾನುವಾರ ಪ್ರಕಟವಾದ ಪೋಸ್ಟ್‌ನಲ್ಲಿ ಟ್ರಂಪ್ ಅವರ ಅಧಿಕೃತ ಭಾವಚಿತ್ರವಿದ್ದು, ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ 2026ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡರು’ ಎಂದು ಬರೆಯಲಾಗಿದೆ.
2025ರ ಜನವರಿ 20ರಂದು ಟ್ರಂಪ್ ಅವರು ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಈಚೆಗೆ ಅಮೆರಿಕದ ಸೇನಾಪಡೆಗಳು ವೆನೆಜುವೆಲಾದ ರಾಜಧಾನಿ ಕರಾಕಸ್ ಮೇಲೆ ದೊಡ್ಡ ಪ್ರಮಾಣದ ವಾಯುದಾಳಿ ನಡೆಸುವ ಮೂಲಕ ದೇಶದ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದವು. ಬಳಿಕ ಅವರನ್ನು ನ್ಯೂಯಾರ್ಕ್‌ಗೆ ಸ್ಥಳಾಂತರಿಸಲಾಯಿತು. ದಂಪತಿ ವಿರುದ್ಧ ಮಾದಕ ವಸ್ತು ಕಳ್ಳಸಾಗಣೆ, ಭಯೋತ್ಪಾದನಾ ಪಿತೂರಿ ಆರೋಪಗಳನ್ನು ಹೊರಿಸಲಾಗಿದೆ.
‘ವೆನೆಜುವೆಲಾದಲ್ಲಿ ಸುರಕ್ಷಿತ ಮತ್ತು ವಿವೇಚನಾಯುಕ್ತ ಪರಿವರ್ತನೆಯನ್ನು ಮಾಡಲು ಸಾಧ್ಯವಾಗುವವರೆಗೆ ನಾವು ಆಡಳಿತ ನಡೆಸುತ್ತೇವೆ. ಜನರ ಹಿತಾಸಕ್ತಿಗಳಿಗೆ ವಿರೋಧಿಸುವವರಿಗೆ ವೆನೆಜುವೆಲಾವನ್ನು ಆಕ್ರಮಿಸಿಕೊಳ್ಳುವ ಅವಕಾಶ ನಾವು ನೀಡುವುದಿಲ್ಲ’ ಎಂದು ಟ್ರಂಪ್ ಹೇಳಿದ್ದಾರೆ.
‘ವೆನೆಜುವೆಲಾದ ಅಧಿಕಾರಿಗಳು 30ರಿಂದ 50 ಮಿಲಿಯನ್ ಬ್ಯಾರೆಲ್‌ಗಳ ಉತ್ತಮ-ಗುಣಮಟ್ಟದ, ಅನುಮೋದಿತ ತೈಲವನ್ನು ಅಮೆರಿಕಕ್ಕೆ ಹಸ್ತಾಂತರಿಸಲಿದ್ದಾರೆ. ಅದನ್ನು ನಾವು ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುತ್ತೇವೆ. ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷನಾಗಿ ನಾನು ಆ ಹಣವನ್ನು ವೆನೆಜುವೆಲಾ ಮತ್ತು ಅಮೆರಿಕ ಜನರಿಗೆ ಪ್ರಯೋಜನವಾಗುವಂತೆ ನೋಡಿಕೊಳ್ಳುತ್ತೇನೆ’ ಎಂದೂ ಟ್ರಂಪ್ ತಿಳಿಸಿದ್ದಾರೆ.
ಈ ಯೋಜನೆಯನ್ನು ತಕ್ಷಣವೇ ಕಾರ್ಯಗತಗೊಳಿಸಲು ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ನಿಕೊಲಸ್ ಮಡೂರೊ ಬಂಧನದ ಬಳಿಕ ಉಪಾಧ್ಯಕ್ಷೆ ಡೆಲ್ಸಿ ರಾಡ್ರಿಗಸ್ ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.