ADVERTISEMENT

ರಾಜ್ಯಪಾಲರ ಹುದ್ದೆ ಘನತೆ ಉಳಿಯಲಿ

​ಪ್ರಜಾವಾಣಿ ವಾರ್ತೆ
Published 17 ಮೇ 2018, 19:30 IST
Last Updated 17 ಮೇ 2018, 19:30 IST
ರಾಜ್ಯಪಾಲರ ಹುದ್ದೆ ಘನತೆ ಉಳಿಯಲಿ
ರಾಜ್ಯಪಾಲರ ಹುದ್ದೆ ಘನತೆ ಉಳಿಯಲಿ   

ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಹುಮತ ಸಾಬೀತಿಗೆ ಅಗತ್ಯವಾದ ಸದಸ್ಯರ ಸಂಖ್ಯೆ ಇಲ್ಲದಿದ್ದರೂ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲು ರಾಜ್ಯಪಾಲರು ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯಪಾಲರ ಈ ನಡೆ ಅನುಮಾನಕ್ಕೆ ಕಾರಣವಾಗಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿದೆ. ಆದರೆ ಸರ್ಕಾರ ರಚಿಸಲು ಬೇಕಾದ ಬಹುಮತ, ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು 117 ಸದಸ್ಯರ ಬೆಂಬಲದ ಪಟ್ಟಿಯನ್ನು ನೀಡಿದ್ದರೂ ರಾಜ್ಯಪಾಲರು ಅದನ್ನು ತಿರಸ್ಕರಿಸಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಬಿಜೆಪಿಯನ್ನು ಸರ್ಕಾರ ರಚಿಸುವಂತೆ ಆಹ್ವಾನಿಸಿರುವುದು ದೇಶದ ಇತರೆಡೆ ಕೂಡ ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗಿದೆ. ಬಿಹಾರ, ಗೋವಾ, ಮೇಘಾಲಯ, ಮಣಿಪುರದಲ್ಲಿಯೂ ಸರ್ಕಾರಗಳ ರಚನೆಗೆ ಅತಿ ಹೆಚ್ಚು ಸ್ಥಾನ ಗಳಿಸಿದ ಪಕ್ಷಕ್ಕೇ ಅವಕಾಶ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ. ಈ ಎಲ್ಲ ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ ಪಕ್ಷವನ್ನು ಬಿಟ್ಟು ಬಿಜೆಪಿ ನೇತೃತ್ವದ ಮೈತ್ರಿಕೂಟಗಳಿಗೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಅತಿ ಹೆಚ್ಚು ಸ್ಥಾನ ಗಳಿಸಿದ ಪಕ್ಷ ಎಂಬ ಮಾನದಂಡದ ಮೇಲೆ ಬಿಜೆಪಿಗೆ ಮೊದಲು ಅವಕಾಶ ಕೊಡಲಾಗಿದೆ. ಅಲ್ಲಿಗೊಂದು ನಿಯಮ, ಇಲ್ಲಿಗೊಂದು ನಿಯಮ ಅನ್ವಯ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ವಿವಾದ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ ಏರಿದೆ. ಕರ್ನಾಟಕದ ರಾಜ್ಯಪಾಲರು ಸಾಂವಿಧಾನಿಕವಾಗಿ ನಡೆದುಕೊಂಡಿಲ್ಲ, ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ ಆದೇಶವನ್ನೂ ಪಾಲಿಸಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ರಾಜ್ಯಪಾಲ ವಜುಭಾಯಿ ವಾಲಾ ಮೂಲತಃ ಬಿಜೆಪಿಯವರು. ಅವರು ರಾಜ್ಯಪಾಲರ ಘನತೆಗೆ ತಕ್ಕಂತೆ ನಡೆದುಕೊಳ್ಳದೆ, ಬಿಜೆಪಿ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ ಎಂಬ ಆಪಾದನೆಯೂ ಕೇಳಿಬರುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ ಪಕ್ಷವನ್ನು ಸರ್ಕಾರ ರಚಿಸುವಂತೆ ಆಹ್ವಾನಿಸಿದ ಉದಾಹರಣೆಗಳು ಸಾಕಷ್ಟು ಇವೆ ಎಂದು ಸಮರ್ಥಿಸಬಹುದಾದರೂ ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತುಪಡಿಸಲು 15 ದಿನಗಳ  ಕಾಲಾವಕಾಶ ನೀಡಿರುವುದು ಯಾವುದೇ ಕಾರಣಕ್ಕೂ ಒಪ್ಪುವ ವಿಚಾರ ಅಲ್ಲ. ಶಾಸಕರ ಖರೀದಿ, ಅನೈತಿಕ ರಾಜಕಾರಣಕ್ಕೆ ಇದು ಅವಕಾಶ ಮಾಡಿಕೊಡುತ್ತದೆ. ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ರೆಸಾರ್ಟ್‌ನಲ್ಲಿ ಕೂಡಿಡಲಾಗಿದೆ. ಈಗ ಇಷ್ಟು ದೀರ್ಘಾವಧಿ ನೀಡಿರುವುದರಿಂದ, ಆಮಿಷ ಅಥವಾ ಬ್ಲ್ಯಾಕ್‌ಮೇಲ್ ರಾಜಕಾರಣಕ್ಕೆ ಶಾಸಕರು ಬಲಿಬೀಳುವುದು ಸುಲಭವಾಗುತ್ತದೆ. ಶಾಸಕರನ್ನು ಎಷ್ಟು ದಿನ ರೆಸಾರ್ಟ್‌ನಲ್ಲಿ ಕೂಡಿಡುವುದು ಸಾಧ್ಯ?

2008ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ, ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕಾರಣವನ್ನು ಹುಟ್ಟು ಹಾಕಿತ್ತು. ಈಗಲೂ ಅಂತಹದೇ ಯತ್ನ ನಡೆಯುತ್ತಿದೆ ಎಂಬ ದೂರು ಕೇಳಿಬರುತ್ತಿದೆ. ‘ನಮ್ಮ ಶಾಸಕರಿಗೆ ಆಮಿಷವೊಡ್ಡಲಾಗುತ್ತಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ‘ಅವರು ನಮ್ಮ ಶಾಸಕರ ತಂಟೆಗೆ ಬಂದರೆ ನಾವೂ ಅವರ ಪಕ್ಷದ ಶಾಸಕರನ್ನು ಸೆಳೆಯುತ್ತೇವೆ’ ಎಂದು ಅವರು ಬಹಿರಂಗವಾಗಿಯೇ ಹೇಳಿದ್ದಾರೆ.ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದ ಬಳಕೆಯ ಬೆದರಿಕೆಗೆ ಮಣಿದು ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಬಿಜೆಪಿ ಕಡೆ ವಾಲಿದ್ದಾರೆ ಎಂಬ ಮಾತನ್ನೂ ಅವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಸರ್ಕಾರ ರಚನೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾದ ಮಾತುಗಳೂ ಪ್ರಜಾಪ್ರಭುತ್ವಕ್ಕೆ ಶೋಭೆ ತರುವಂತಹದ್ದಲ್ಲ. ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಎರಡು ದಿನ ಕಳೆಯುವುದರೊಳಗೇ ನಡೆಯುತ್ತಿರುವ ಈ ವಿದ್ಯಮಾನಗಳು ಪ್ರಜಾಪ್ರಭುತ್ವವನ್ನು ಅಣಕ ಮಾಡುವಂತಿವೆ. ಈ ಎಲ್ಲ ಬೆಳವಣಿಗೆ, ಪ್ರಾಮಾಣಿಕವಾಗಿ ಮತದಾನ ಮಾಡಿದ ರಾಜ್ಯದ ಜನರಿಗೆ ಮಾಡುವ ದ್ರೋಹ. ಇದಕ್ಕೆಲ್ಲಾ ರಾಜ್ಯಪಾಲರೇ ಹೊಣೆಯಾಗುತ್ತಾರೆ. ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ರಾಜ್ಯಪಾಲರು ಪಕ್ಷದ ಕಾರ್ಯಕರ್ತರಂತೆ ನಡೆದುಕೊಳ್ಳುವುದು ಪ್ರಜಾಪ್ರಭುತ್ವಕ್ಕೂ, ಸಂವಿಧಾನಕ್ಕೂ ಮಾಡುವ ಅಪಚಾರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT