ADVERTISEMENT

ಡಿ.ಕೆ. ಶಿವಕುಮಾರ್ ಪರಿಚಯ: ಬಾಲ್ಯ, ಶಿಕ್ಷಣ, ರಾಜಕೀಯ ಜೀವನ...

ಪ್ರಜಾವಾಣಿ ವಿಶೇಷ
Published 18 ಮೇ 2023, 6:24 IST
Last Updated 18 ಮೇ 2023, 6:24 IST
 ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ಕಾಂಗ್ರೆಸ್‌ ‍ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಉಪ ಮುಖ್ಯಮಂತ್ರಿಯಾಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

ಬಾಲ್ಯ...

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು, ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ ಡಿ.ಕೆ.ಶಿವಕುಮಾರ್ 15ನೇ ಮೇ, 1962ರಂದು ಜನಿಸಿದರು. 

ತಮ್ಮ 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐಗೆ ಸೇರ್ಪಡೆಯಾದರು.

ADVERTISEMENT
ಶಿಕ್ಷಣ...

ವಿದ್ಯಾಭ್ಯಾಸಕ್ಕೆಂದು ಶಿವಕುಮಾರ್‌ ಬೆಂಗಳೂರಿಗೆ ಬಂದರು. ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ಮುಕ್ತಾ ವಿಶ್ವವಿದಾಲಯದಲ್ಲಿ ರಾಜಕೀಯ ಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ರಾಜಕೀಯ...

1985ರ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸಿ ಸೋತರು. ಚುನಾವಣೆಯಲ್ಲಿ ದೇವೇಗೌಡರಿಗೆ ಸಾಕಷ್ಟು ಪ್ರಬಲ ಪ್ರತಿರೋಧ ತೋರಿದರು.  

1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು.

1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮೂಲಕ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು.

1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‍ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿ ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದರಲ್ಲಿ ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಬಂಗಾರಪ್ಪ ಶಿವಕುಮಾರ್‌ಗೆ ಬಂಧಿಖಾನೆ ಸಚಿವ ಸ್ಥಾನ ನೀಡಿದರು. 

1994ರಲ್ಲಿ ಪಕ್ಷ ಟಿಕೆಟ್ ನೀಡಲಿಲ್ಲ. ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿದರು.

ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್‍ ದರ್ಜೆ ಸಚಿವರಾಗಿ ಕೆಲಸ ಮಾಡಿದರು. ಸಹಕಾರ ಸಚಿವರಾಗಿ, ನಗರಾಭಿವೃದ್ಧಿ ಖಾತೆ ಮತ್ತು ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದರು.(1999-2002).

2004ರಲ್ಲಿ ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರು. ಈ ವೇಳೆ ಪಕ್ಷ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು. 

2008ರಲ್ಲಿ ಮತ್ತೆ ಶಿವಕುಮಾರ್‌ ಶಾಸಕರಾದರು. ಈ ವೇಳೆ ಬಿಜೆಪಿ ಅಧಿಕಾರ ಪಡೆಯಿತು. 

2013ರಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರ ಪಡೆಯಿತು. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದರು. ಇಂಧನ ಸಚಿವರಾಗಿ ಕೆಲಸ ಮಾಡಿದರು.

2018ರಲ್ಲಿ ಕಾಂಗ್ರೆಸ್‌ ಪಕ್ಷ ಪೂರ್ಣ ಬಹುಮತ ಪಡೆಯಲಿಲ್ಲ. ಈ ವೇಳೆ ಜೆಡಿಎಸ್‌ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತು. ಜೆಡಿಎಸ್‌ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಈ ವೇಳೆ ಶಿವಕುಮಾರ್‌ ಜಲಸಂಪನ್ಮೂಲ ಸಚಿವರಾದರು.  ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿತು.

2023ರಲ್ಲಿ ಕಾಂಗ್ರೆಸ್‌ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರ ಗದ್ದುಗೆ ಹಿಡಿದಿದೆ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದು, ಶಿವಕುಮಾರ್‌ ಉಪಮುಖ್ಯಮಂತ್ರಿಯಾಗುತ್ತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.