ಈ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನದ ಪ್ರಶ್ನೆ ಪತ್ರಿಕೆಗಳು ಬಹಿರಂಗಗೊಂಡು ಪರೀಕ್ಷೆಗಳು ಮುಂದೂಡಲಾಗಿದೆ. ಇದಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರ ಕಾರ್ಯವೈಖರಿ ಕಾರಣ. ಅವರ ಬೇಜವಾಬ್ದಾರಿತನಕ್ಕೆ ಸಹಸ್ರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಈ ಮಾಹಿತಿ ತಂತ್ರಜ್ಞಾನ ಕಾಲದಲ್ಲೂ ಪ್ರಶ್ನೆ ಪತ್ರಿಕೆಗಳು ಬಹಿರಂಗವಾಗುತ್ತವೆ ಎಂದರೆ ಅಚ್ಚರಿಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಆಗಿರುವ ಮಾನಸಿಕ ಹಿಂಸೆ ಮತ್ತು ಅವರ ಪೋಷಕರಿಗೆ ಆಗಿರುವ ಆತಂಕಗಳ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಕಿಂಚಿತ್ತೂ ಪಶ್ಚಾತ್ತಾಪ ಆಗಿಲ್ಲ.
ಮಾರ್ಚ್ 16 ರಂದು ನಡೆದ ಜೀವಶಾಸ್ತ್ರದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಪರೀಕ್ಷೆಗೆ ಮೊದಲೇ ಬಹಿರಂಗವಾದ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದು ಬಂದರೂ ಪದವಿ ಪೂರ್ವ ಶಿಕ್ಷಣ ಇಲಾಖೆ ತಕ್ಷಣ ಕ್ರಮ ತೆಗೆದುಕೊಳ್ಳಲಿಲ್ಲ. ಪ್ರಶ್ನೆ ಪತ್ರಿಕೆಗಳನ್ನು ಬಹಿರಂಗಪಡಿಸಿ ಕೆಲವೇ ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಸುಂದರ ಭವಿಷ್ಯ ರೂಪಿಸಿಕೊಳ್ಳಲು ನೆರವಾಗುವ ಸಿಬ್ಬಂದಿಯ ಮನಃಸ್ಥಿತಿ ಎಂಥದು? ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.