ADVERTISEMENT

ಕ್ರಿಕೆಟ್ ಪಂದ್ಯಕ್ಕೆ ವಾಟಾಳ್ ಬೆಂಬಲ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 19:59 IST
Last Updated 18 ಡಿಸೆಂಬರ್ 2012, 19:59 IST

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿ.25ರಂದು ನಡೆಯಲಿರುವ ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಯಾರೂ ಅಡ್ಡಿಪಡಿಸಬಾರದು ಎಂದು ಆಗ್ರಹಿಸಿ ಹಲವು ಕನ್ನಡ ಪರ ಸಂಘಟನೆಗಳ ಸದಸ್ಯರು ನಗರದ ಚಿನ್ನಾಸ್ವಾಮಿ ಕ್ರೀಡಾಂಗಣದ ಪ್ರವೇಶ ದ್ವಾರದ ಮುಂದೆ ಮಂಗಳವಾರ ಬಿಳಿ ಬಾವುಟ ಪ್ರದರ್ಶಿಸಿದರು.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, `ಹಲವು ವರ್ಷಗಳ ನಂತರ ನಮ್ಮ ನಗರದಲ್ಲಿ ಭಾರತ ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯವನ್ನು ವೀಕ್ಷಿಸಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಇಂತಹ ಸಂದರ್ಭದಲ್ಲಿ ಕೆಲವು ಸಂಘಟನೆಗಳು ಪಂದ್ಯಕ್ಕೆ ಅಡ್ಡಿಪಡಿಸುವುದಾಗಿ ಹೇಳುವ ಮೂಲಕ ಅಭಿಮಾನಿಗಳ ಆತಂಕಕ್ಕೆ ಮತ್ತು ಆಕ್ರೋಶಕ್ಕೆ ಕಾರಣವಾಗಿವೆ' ಎಂದರು.

`ಪಂದ್ಯದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಆಟಗಾರರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಬರುತ್ತಿದ್ದಾರೆ. ಅವರಿಗೆ ಅತ್ಯಂತ ಪ್ರೀತಿ ವಿಶ್ವಾಸದಿಂದ ಸ್ವಾಗತ ಕೋರುವುದು ನಮ್ಮ ಕರ್ತವ್ಯ. ಆದರೆ, ಟಿಕೆಟ್ ಪಡೆದು ಕ್ರೀಡಾಂಗಣ ಪ್ರವೇಶಿಸಿ ಪಂದ್ಯಕ್ಕೆ ಅಡ್ಡಿಪಡಿಸುತ್ತೇವೆ ಎಂದು ಕೆಲ ಸಂಘಟನೆಗಳ ಮುಖಂಡರು ಹೇಳಿರುವುದು ಖಂಡನೀಯ ಎಂದು ಹೇಳಿದರು. ಯಾವುದೇ ಭಿನ್ನಾಭಿಪ್ರಾಯವನ್ನು ಕ್ರೀಡೆಯಲ್ಲಿ ತರಬಾರದು. ಈ ಮೂಲಕ ಭಾರತ ಮತ್ತು ಪಾಕಿಸ್ತಾನ  ನಡುವೆ ಉತ್ತಮ ಬಾಂಧವ್ಯ ಬೆಳೆಸೋಣ' ಎಂದು ವಾಟಾಳ್ ಕರೆ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.