ADVERTISEMENT

ಟಿಕೆಟ್‌ಗಾಗಿ ನೂಕುನುಗ್ಗಲು; ಲಾಠಿ ಪ್ರಹಾರ, ಒಬ್ಬನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2011, 18:10 IST
Last Updated 24 ಫೆಬ್ರುವರಿ 2011, 18:10 IST

ಬೆಂಗಳೂರು: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯದ ಟಿಕೆಟ್ ಖರೀದಿಸಲು ಗುರುವಾರ ಕ್ರೀಡಾಭಿಮಾನಿಗಳು ಮುಗಿಬಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು.

ಕ್ರೀಡಾಂಗಣದ 20ನೇ ಪ್ರವೇಶ ದ್ವಾರದ ಬಳಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರಿಂದ ಕ್ರೀಡಾಭಿಮಾನಿಗಳು ದಿಕ್ಕಾಪಾಲಾಗಿ ಓಡಿದ ಪರಿಣಾಮದಿಂದ ಕಾಲ್ತುಳಿತ ಉಂಟಾಗಿ ಒಂಬತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಅವರಲ್ಲಿ ತೀವ್ರವಾಗಿ ಗಾಯಗೊಂಡ ಕಾಟನ್‌ಪೇಟೆಯ ವಿನೋದ್ (19) ಎಂಬ ಯುವಕನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಗಿದೆ.

ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳ ಸಾವಿರಾರು ಕ್ರಿಕೆಟ್ ಪ್ರೇಮಿಗಳು ಟಿಕೆಟ್ ಪಡೆಯಲು ಬುಧವಾರ ರಾತ್ರಿಯಿಂದಲೇ ಕ್ರೀಡಾಂಗಣದ ಸಮೀಪ ಜಮಾಯಿಸಿದ್ದರು. ಬೆಳಿಗ್ಗೆಯಾಗುತ್ತಿದ್ದಂತೆ ಭಾರಿ ಸಂಖ್ಯೆಯ ಜನರು ಟಿಕೆಟ್ ಕೌಂಟರ್‌ಗಳಿಗೆ ಮುಗಿಬಿದ್ದರು. ಇದರಿಂದ ನೂಕುನುಗ್ಗಲು ಉಂಟಾಯಿತು. ಮಹಿಳೆಯರಿಗೆ ಪ್ರತ್ಯೇಕ ಕೌಂಟರ್‌ನಲ್ಲಿ ಟಿಕೆಟ್ ನೀಡಲಾಗುತ್ತಿತ್ತು.

ಪೊಲೀಸರು ಪುರುಷರ ಮೇಲೆ ಲಾಠಿ ಪ್ರಹಾರ ನಡೆಸಿದ್ದರಿಂದ ಆತಂಕಗೊಂಡ ಮಹಿಳೆಯರು ಚೆಲ್ಲಾಪಿಲ್ಲಿಯಾಗಿ ಓಡಿದರು. ಈ ವೇಳೆ ಪೊಲೀಸರು ಮತ್ತು ಕ್ರೀಡಾಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಗಾಯಾಳು ವಿನೋದ್‌ಗೆ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಕಬ್ಬನ್‌ಪಾರ್ಕ್ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.