ಅಭಿಷೇಕ್ ಶರ್ಮಾ
(ಪಿಟಿಐ ಚಿತ್ರ)
ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟ್ವೆಂಟಿ -20 ಅಂತರರಾಷ್ಟ್ರೀಯ ಕ್ರಿಕೆಟ್‌ನ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಎಡಗೈ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಇದೇ ಮೊದಲ ಬಾರಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅವರನ್ನು ಹಿಂದಿಕ್ಕಿರುವ ಅಭಿಷೇಕ್ ಅಗ್ರ ಶ್ರೇಯಾಂಕ ಗಳಿಸಿದ್ದಾರೆ. ಅಭಿಷೇಕ್ 829 ಹಾಗೂ ಹೆಡ್ 814 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ.
ಭಾರತದವರೇ ಆದ ತಿಲಕ್ ವರ್ಮಾ ಮೂರು ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಆರನೇ ಸ್ಥಾನದಲ್ಲಿದ್ದಾರೆ.
ಅಗ್ರಸ್ಥಾನ ಕಾಯ್ದುಕೊಂಡ ಜಡೇಜ...
ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ರವೀಂದ್ರ ಜಡೇಜ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ತಮ್ಮ ಸ್ಥಾನ ಮತ್ತಷ್ಟು ಉತ್ತಮಪಡಿಸಿಕೊಂಡಿರುವ ಜಡೇಜ ಒಟ್ಟು 422 ರೇಟಿಂಗ್ ಪಾಯಿಂಟ್ಸ್ ಹೊಂದಿದ್ದಾರೆ. ಭಾರತದ ಮಗದೋರ್ವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಎಂಟು ಸ್ಥಾನಗಳ ಬಡ್ತಿ ಪಡೆದು 13ನೇ ಕ್ರಮಾಂಕಕ್ಕೆ ತಲುಪಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಡೇಜ ಹಾಗೂ ವಾಷಿಂಗ್ಟನ್ ಅಮೋಘ ಶತಕಗಳನ್ನು ಗಳಿಸಿದ್ದರಲ್ಲದೆ ಪಂದ್ಯವನ್ನು ಡ್ರಾಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಟೆಸ್ಟ್ ಬ್ಯಾಟರ್‌ಗಳ ವಿಭಾಗದಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಮುಂಚೂಣಿಯಲ್ಲಿದ್ದಾರೆ. ಭಾರತದ ರಿಷಭ್ ಪಂತ್ ಒಂದು ಸ್ಥಾನ ಬಡ್ತಿ ಪಡೆದು ಏಳನೇ ಸ್ಥಾನಕ್ಕೆ ತಲುಪಿದ್ದಾರೆ.
ಆದರೆ ಯಶಸ್ವಿ ಜೈಸ್ವಾಲ್ ಮೂರು ಸ್ಥಾನಗಳ ಕುಸಿತ ಕಂಡಿದ್ದು, ಎಂಟನೇ ಸ್ಥಾನದಲ್ಲಿದ್ದಾರೆ. ನಾಯಕ ಶುಭಮನ್ ಗಿಲ್ ಒಂಬತ್ತನೇ ಕ್ರಮಾಂಕ ಕಾಯ್ದುಕೊಂಡಿದ್ದಾರೆ.
ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಜಸ್‌ಪ್ರೀತ್ ಬೂಮ್ರಾ ಅಗ್ರಸ್ಥಾನದಲ್ಲಿದ್ದಾರೆ. ಬೂಮ್ರಾ ಒಟ್ಟು 898 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.