ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಮತ್ತು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹ ತೂಕದ ಬಗ್ಗೆ ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.
ಶಮಾ ಮೊಹಮ್ಮದ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ‘ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯವಾಡಲು ಸಜ್ಜಾಗಿರುವ ಹೊತ್ತಿನಲ್ಲಿ ಜವಾಬ್ದಾರಿಯುತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ರೋಹಿತ್ ಶರ್ಮಾ ಅವರ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದು ತುಂಬಾ ದುರದೃಷ್ಟಕರ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಶಮಾ ಮೊಹಮ್ಮದ್ ಹೇಳಿದ್ದೇನು?
‘ರೋಹಿತ್ ಶರ್ಮಾ ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ! ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ’ ಎಂದು ಶಮಾ ಮೊಹಮ್ಮದ್ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.
ಕಾಂಗ್ರೆಸ್ ಪ್ರತಿಕ್ರಿಯೆ...
‘ಶಮಾ ಮೊಹಮ್ಮದ್ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಪಕ್ಷಕ್ಕೆ ಸಂಬಂಧವಿಲ್ಲ. ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಅವರಿಗೆ ಸೂಚಿಸಲಾಗಿದೆ. ಭವಿಷ್ಯದಲ್ಲಿ ಭಾರಿ ಎಚ್ಚರಿಕೆ ಪಾಲಿಸಬೇಕು ಎಂದೂ ತಿಳಿಸಲಾಗಿದೆ’ ಎಂದು ಕಾಂಗ್ರೆಸ್‌ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.