ADVERTISEMENT

ಇದು RCBಯ ಹೊಸ ಅಧ್ಯಾಯ: ಗೆಲುವು ಖುಷಿ ಕೊಟ್ಟಿದೆ; ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮೇ 2024, 7:23 IST
Last Updated 19 ಮೇ 2024, 7:23 IST
   

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್‌ಗಳ ರೋಚಕ ಗೆಲುವು ದಾಖಲಿಸಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಪಂದ್ಯದ ರೋಚಕ ಕ್ಷಣಗಳನ್ನು ಖುದ್ದು ಕ್ರೀಡಾಂಗಣಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯ ಕಣ್ತುಂಬಿಕೊಂಡಿದ್ದಾರೆ.

ಗೃಹ ಸಚಿವ ಪರಮೇಶ್ವರ್, ಸಚಿವ ಹೆಚ್‌.ಸಿ. ಮಹದೇವಪ್ಪ ಜೊತೆ ಕ್ರೀಡಾಂಗಣಕ್ಕೆ ತೆರಳಿ ಐಪಿಎಲ್ ಕ್ರಿಕೆಟ್ ಪಂದ್ಯವನ್ನು ಸಿಎಂ ವೀಕ್ಷಿಸಿದ್ದಾರೆ.

ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್‌ಸಿಬಿ ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. #NammaRCB ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದದ್ದು ಖುಷಿಕೊಟ್ಟಿದೆ. ಇದು ಆರ್‌ಸಿಬಿಯ ಹೊಸ ಅಧ್ಯಾಯ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ಆರ್‌ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದಾನ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪಂದ್ಯವನ್ನು ವೀಕ್ಷಿಸಿದ್ದಾರೆ.

ಪಂದ್ಯಕ್ಕೂ ಮುನ್ನ, ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್‌ಸಿಬಿ ಹುಡುಗರೇ.. ಎಂದು ಶಿವರಾಜ್ ಕುಮಾರ್‌ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಪಂದ್ಯದ ಬಳಿಕ, ಜಾಸ್ತಿ ಹೇಳಲ್ಲ, ಆಗಲೇ ಬಹಳ ಹೇಳಿಬಿಟ್ಟಿದ್ದೀನಿ ಎಂದು ಪೋಸ್ಟ್ ಮಾಡಿದ್ದಾರೆ.

ಇದೇ ವೇಳೆ, ಆರ್‌ಸಿಬಿಯಲ್ಲಿದ್ದ ಮಾಜಿ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಅವರ ಜೊತೆ ರಿಷಬ್ ಶೆಟ್ಟಿ ಫೋಟೊ ಕ್ಲಿಕ್ಕಿಸಿಕೊಂಡಿದ್ದು, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.