ಸಿಡ್ನಿ: ಪರ್ತ್‌ನಲ್ಲಿ ಅಕ್ಟೋಬರ್ 19 ರಿಂದ ಆರಂಭವಾಗಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಬಹಳ ವಿಶೇಷವಾಗಿದೆ. ಏಕೆಂದರೆ ಇದು ತಾರಾ ಆಟಗಾರರಾಗಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ನಮ್ಮ ದೇಶದಲ್ಲಿ ನೋಡಲು ಕ್ರಿಕೆಟ್ ಅಭಿಮಾನಿಗಳಿಗೆ ಕೊನೆಯ ಅವಕಾಶವಾಗಿರಬಹುದು ಎಂದು ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಅಭಿಪ್ರಾಯಪಟ್ಟಿದ್ದಾರೆ.
ಬೆನ್ನು ನೋವಿನ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿರುವ ಪ್ಯಾಟ್ ಕಮಿನ್ಸ್ ತಾವು ಕೂಡ ಪಂದ್ಯ ವೀಕ್ಷಿಸುವುದಾಗಿ ಹೇಳಿಕೊಂಡಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಕುರಿತು ಮಾತನಾಡಿ ಕಮಿನ್ಸ್, 'ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕಳೆದ 15 ವರ್ಷಗಳಿಂದ ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿದ್ದಾರೆ. ಅವರನ್ನು ಆಸ್ಟ್ರೇಲಿಯಾದ ಕ್ರಿಕೆಟ್ ಅಭಿಮಾನಿಗಳು ಇಲ್ಲಿನ ಮೈದಾನದಲ್ಲಿ ನೋಡುವ ಕೊನೆಯ ಅವಕಾಶ ಇದಾಗಿರಬಹುದು' ಎಂದು ಜಿಯೋ ಹಾಟ್‌ಸ್ಟಾರ್‌ಗೆ ತಿಳಿಸಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ರೋಹಿತ್ ಹಾಗು ಕೊಹ್ಲಿ, ಭಾರತಕ್ಕಾಗಿ ಅನೇಕ ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಮಾತ್ರವಲ್ಲ, ಈ ಇಬ್ಬರು ಕೂಡ ಅಭಿಮಾನಿಗಳಿಂದ ಉತ್ತಮ ಬೆಂಬಲ ಪಡೆಯುತ್ತಿದ್ದಾರೆ. ಹಾಗಾಗಿ ನಾವು ಅವರ ವಿರುದ್ಧ ಆಡಿದಾಗಲೆಲ್ಲ ಮೈದಾನದಲ್ಲಿ ಜನಸಂದಣಿ ಹೆಚ್ಚಾಗಿರುತ್ತದೆ' ಎಂದರು.
ಇನ್ನೂ ಭಾರತ ವಿರುದ್ಧ ಆಡುತ್ತಿರುವ ಸರಣಿಯನ್ನು ತಪ್ಪಿಸಿಕೊಳ್ಳುತ್ತಿರುವುದಕ್ಕೆ ತಾವು ಕೂಡ ನಿರಾಶೆಗೊಂಡಿರುವುದಾಗಿ ತಿಳಿಸಿದರು. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.