ಚಿತ್ರ ಕೃಪೆ: @ICC
ದುಬೈ: ಸೆಪ್ಟೆಂಬರ್ ತಿಂಗಳ ಐಸಿಸಿ ವರ್ಷದ ಆಟಗಾರ ಪ್ರಶಸ್ತಿಗೆ ಭಾರತದ ಮೂವರು ಆಟಗಾರರು ನಾಮನಿರ್ದೇಶನಗೊಂಡಿದ್ದಾರೆ. ಪುರುಷರ ವಿಭಾಗದಲ್ಲಿ ಟಿ20 ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಸ್ಪಿನ್ನರ್ ಕುಲದೀಪ್ ಯಾದವ್ ಇದ್ದರೆ, ಮಹಿಳಾ ವಿಭಾಗದಲ್ಲಿ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ನಾಮನಿರ್ದೇಶನಗೊಂಡಿದ್ದಾರೆ.
ಯುಎಇಯಲ್ಲಿ ನಡೆದ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಅಭಿಷೇಕ್ ಶರ್ಮಾರ ಬ್ಯಾಟಿಂಗ್. ಅವರು ಟೂರ್ನಿಯಲ್ಲಿ ಆಡಿದ 7 ಪಂದ್ಯಗಳಿಂದ ಮೂರು ಅರ್ಧಶತಕ ಸಹಿತ 314 ರನ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು.
ಇನ್ನು 25 ವರ್ಷದ ಅಭಿಷೇಕ್ ಶರ್ಮಾ ಟಿ20 ಯಲ್ಲಿ 931 ಅಂಕಗಳೊಂದಿಗೆ ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮಾತ್ರವಲ್ಲ, ಇದುವರೆಗೂ ಟಿ–20 ಕ್ರಿಕೆಟ್‌ನಲ್ಲಿ ಯಾವುದೇ ಆಟಗಾರ ಹೊಂದಿರದ ರೇಟಿಂಗ್ಸ್ ಅನ್ನು ಅಭಿಷೇಕ್ ತಲುಪಿದ್ದಾರೆ.
ಇನ್ನೂ ಏಷ್ಯಾ ಕಪ್‌ನಲ್ಲಿ ಬರೋಬ್ಬರಿ 17 ವಿಕೆಟ್ ಹಾಗೂ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಪ್ರಮುಖ 4 ವಿಕೆಟ್ ಪಡೆದು ಭಾರತದ ಗೆಲುವಿಗೆ ಕಾರಣರಾಗಿರುವ ಸ್ಪಿನ್ನರ್ ಕುಲದೀಪ್ ಯಾದವ್ ಕೂಡ ಸೆಪ್ಟೆಂಬರ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿ ಸತತ 2 ಶತಕ ಸಿಡಿಸಿದ್ದ ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನ ಕೂಡ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.