ADVERTISEMENT

ರ‍್ಯಾಂಕಿಂಗ್‌: ರೋಹಿತ್‌ ಶರ್ಮಾ ಶ್ರೇಷ್ಠ ಸಾಧನೆ

ಪಿಟಿಐ
Published 8 ಅಕ್ಟೋಬರ್ 2019, 13:26 IST
Last Updated 8 ಅಕ್ಟೋಬರ್ 2019, 13:26 IST
ರೋಹಿತ್‌ ಶರ್ಮಾ
ರೋಹಿತ್‌ ಶರ್ಮಾ   

ದುಬೈ: ಭಾರತದ ರೋಹಿತ್‌ ಶರ್ಮಾ, ಸೋಮವಾರ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 17ನೇ ಸ್ಥಾನಕ್ಕೇರಿದ್ದಾರೆ.

ಇದು ರೋಹಿತ್‌ ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ.

ವಿಶಾಖಪಟ್ಟಣದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್‌ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ರೋಹಿತ್‌, ಎರಡು ಇನಿಂಗ್ಸ್‌ಗಳಲ್ಲೂ ಶತಕ ಗಳಿಸಿ ದಾಖಲೆ ಬರೆದಿದ್ದರು. ಅವರು ಒಟ್ಟು 36 ಸ್ಥಾನ ಪ್ರಗತಿ ಕಂಡಿದ್ದಾರೆ.

ADVERTISEMENT

ಮಯಂಕ್‌ ಸಾಧನೆ: ಕರ್ನಾಟಕದ ಮಯಂಕ್‌ ಅಗರವಾಲ್‌ ಕೂಡ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಅವರು 25ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಮಯಂಕ್‌, 38 ಸ್ಥಾನ ಮೇಲೇರಿದ್ದಾರೆ.

ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ, ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಅವರ ರ‍್ಯಾಂಕಿಂಗ್‌ ಪಾಯಿಂಟ್ಸ್‌ 899ಕ್ಕೆ ಕುಸಿದಿದೆ. ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್‌, ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌, 10ನೇ ಸ್ಥಾನಕ್ಕೆ ಜಿಗಿದಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದಲ್ಲಿ ಒಟ್ಟು ಎಂಟು ವಿಕೆಟ್‌ ಉರುಳಿಸಿದ್ದ ಅವರು ನಾಲ್ಕು ಸ್ಥಾನ ಮೇಲೇರಿದ್ದಾರೆ.

ಮಧ್ಯಮ ವೇಗದ ಬೌಲರ್‌ ಮೊಹಮ್ಮದ್‌ ಶಮಿ 18ರಿಂದ 16ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಅವರು ಒಟ್ಟು 710 ಪಾಯಿಂಟ್ಸ್‌ ಗಳಿಸಿ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜ, ಎರಡನೇ ಸ್ಥಾನಕ್ಕೇರಿದ್ದಾರೆ. ಅವರು ಬಾಂಗ್ಲಾದೇಶದ ಶಕೀಬ್‌ ಅಲ್ ಹಸನ್‌ ಅವರನ್ನು ಹಿಂದಿಕ್ಕಿದ್ದಾರೆ.

ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್‌ ಮತ್ತು ಡೀನ್‌ ಎಲ್ಗರ್‌ ಅವರೂ ರ‍್ಯಾಂಕಿಂಗ್‌ನಲ್ಲಿ ಪ್ರಗತಿ ಕಂಡಿದ್ದಾರೆ.

ಡಿ ಕಾಕ್‌ ಮತ್ತು ಎಲ್ಗರ್‌ ಕ್ರಮವಾಗಿ 7 ಮತ್ತು 14ನೇ ಸ್ಥಾನಗಳಿಗೆ ಜಿಗಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.