ಜಸ್‌ಪ್ರೀತ್ ಬೂಮ್ರಾ, ರಿಷಭ್ ಪಂತ್
(ರಾಯಿಟರ್ಸ್ ಚಿತ್ರ)
ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದ ಟೆಸ್ಟ್ ಬೌಲರ್‌ಗಳ ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್‌ಪ್ರೀತ್ ಬೂಮ್ರಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಅತ್ತ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಬಡ್ತಿ ಪಡೆದಿರುವ ರಿಷಭ್ ಪಂತ್ ಆರನೇ ಸ್ಥಾನಕ್ಕೆ ತಲುಪಿದ್ದಾರೆ.
ಬೂಮ್ರಾ, ಟೆಸ್ಟ್ ಬೌಲರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ 10ರ ಪಟ್ಟಿಯಲ್ಲಿರುವ ಏಕಮಾತ್ರ ಭಾರತೀಯ ಬೌಲರ್ ಆಗಿದ್ದಾರೆ. 907 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ.
ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ (859) ಎರಡು ಹಾಗೂ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ (846) ಮೂರನೇ ಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ ಐದು ವಿಕೆಟ್‌ಗಳ ಸಾಧನೆ ಮಾಡಿದ್ದರು.
ಮತ್ತೊಂದೆಡೆ ಎರಡೂ ಇನಿಂಗ್ಸ್‌ಗಳಲ್ಲಿ ಶತಕದ ಸಾಧನೆ ಮಾಡಿದ್ದ ರಿಷಭ್ ಪಂತ್ ಒಟ್ಟು 801 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. 2022ರಲ್ಲಿ ಪಂತ್ ಜೀವನಶ್ರೇಷ್ಠ ಐದನೇ ಸ್ಥಾನ ಪಡೆದಿದ್ದರು.
ಅಗ್ರ 10 ಬ್ಯಾಟರ್‌ಗಳ ಪಟ್ಟಿಯಲ್ಲಿ ಭಾರತದ ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಲೀಡ್ಸ್ ಟೆಸ್ಟ್‌ನಲ್ಲಿ ಜೈಸ್ವಾಲ್ ಶತಕ ಗಳಿಸಿದ್ದರು.
ಟೆಸ್ಟ್ ಬ್ಯಾಟರ್‌ಗಳ ಅಗ್ರ ಐದರ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಈ ವಿಭಾಗದಲ್ಲಿ ಇಂಗ್ಲೆಂಡ್‌ನ ಜೋ ರೂಟ್ (889) ಅಗ್ರಸ್ಥಾನದಲ್ಲಿದ್ದು, ಹ್ಯಾರಿ ಬ್ರೂಕ್ (874) ಎರಡನೇ ಸ್ಥಾನ ಅಲಂಕರಿಸಿದ್ದಾರೆ. ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ (867) ಮೂರನೇ ಸ್ಥಾನದಲ್ಲಿದ್ದಾರೆ.
ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ರವೀಂದ್ರ ಜಡೇಜ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.