ಕರುಣ್ ನಾಯರ್
ಲೀಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಅಲ್ಲದೆ ಬರೋಬ್ಬರಿ ಎಂಟು ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಕರುಣ್ ನಾಯರ್ ವಾಪಸ್ ಆಗಿದ್ದಾರೆ.
ಕನ್ನಡಿಗರಾದ ಕೆ.ಎಲ್. ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ತಂಡದಲ್ಲಿದ್ದಾರೆ. ಆ ಮೂಲಕ ಮೂವರು ಕನ್ನಡಿಗರು ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
2017ರಲ್ಲಿ ಕರುಣ್ ನಾಯರ್ ಕೊನೆಯದಾಗಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಅದಾದ ಬಳಿಕ ಭಾರತ 77 ಟೆಸ್ಟ್‌ಗಳನ್ನು ಆಡಿತ್ತು. ಆದರೆ ಕರುಣ್‌ಗೆ ಅವಕಾಶ ದೊರಕಿರಲಿಲ್ಲ.
ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿರುವುದು 33ರ ಹರೆಯದ ಕರುಣ್‌ಗೆ ವರದಾನವಾಗಿ ಪರಿಣಮಿಸಿತ್ತು. 2024-25ರ ಸಾಲಿನ ದೇಶೀಯ ಕ್ರಿಕೆಟ್‌ನಲ್ಲಿ, 54ರ ಸರಾಸರಿಯಲ್ಲಿ 863 ರನ್ ಗಳಿಸಿದ್ದರು. ಅಲ್ಲದೆ ವಿದರ್ಭ ತಂಡವು ಮೂರನೇ ಸಲ ರಣಜಿ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಕರುಣ್ ನಾಯರ್ ಈವರೆಗೆ ಏಳು ಟೆಸ್ಟ್ ಪಂದ್ಯಗಳನ್ನು ಆಡಿದ್ದು, 62.33ರ ಸರಾಸರಿಯಲ್ಲಿ 374 ರನ್ ಗಳಿಸಿದ್ದಾರೆ. ವೀರೇಂದ್ರ ಸೆಹ್ವಾಗ್ ಬಳಿಕ ತ್ರಿಶತಕ (303) ಗಳಿಸಿದ ಭಾರತದ ಬ್ಯಾಟರ್ ಎಂಬ ದಾಖಲೆ ಅವರದ್ದಾಗಿದೆ.
ಸಾಯಿ ಸುದರ್ಶನ್ ಪದಾರ್ಪಣೆ...
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಭಾರತದ ಪರ ಉದಯೋನ್ಮುಖ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ ಪದಾರ್ಪಣೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಪದಾರ್ಪಣೆ ಮಾಡಿದ 317ನೇ ಆಟಗಾರ ಎನಿಸಿದ್ದಾರೆ.
ಇದೇ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಶುಭಮನ್ ಗಿಲ್ ಮುನ್ನಡೆಸುತ್ತಿದ್ದಾರೆ.
ಭಾರತದ ಆಡುವ ಹನ್ನೊಂದರ ಬಳಗ ಇಂತಿದೆ:
ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.