
ಶುಭಮನ್ ಗಿಲ್
(ಪಿಟಿಐ ಚಿತ್ರ)
ನವದೆಹಲಿ: ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಡೆಯಲಿರುವ ಗುವಾಹಟಿಗೆ ಭಾರತ ತಂಡದೊಂದಿಗೆ ನಾಯಕ ಶುಭಮನ್ ಗಿಲ್ ಬುಧವಾರ ಬಂದಿಳಿದರು.
26 ವರ್ಷದ ಗಿಲ್ ಅವರು ಕೋಲ್ಕತ್ತದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆಯ ಸ್ನಾಯು ಸೆಳೆತಕ್ಕೊಳಗಾಗಿದ್ದರು. ಅದರಿಂದಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಆಡಿರಲಿಲ್ಲ. ಇದೇ 22ರಂದು ಸರಣಿಯ ಎರಡನೇ ಪಂದ್ಯವು ಗುವಾಹಟಿಯಲ್ಲಿ ಆರಂಭವಾಗಲಿದೆ.
‘ಶುಭಮನ್ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರು ಗುವಾಹಟಿಗೆ ತಂಡದೊಂದಿಗೆ ಹೋಗಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜೀತ್ ಸೈಕಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದರೆ ಗಿಲ್ ಅವರು ಆಡುವ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ. ಅವರ ಬದಲಿಗೆ ಆಲ್‌ರೌಂಡರ್ ನಿತೀಶ್ ರೆಡ್ಡಿ ಅವರು ಅವಕಾಶ ಪಡೆಯುವುದು ಖಚಿತವಾಗಿದೆ. ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಎ ತಂಡದ ಎದುರಿನ ಸರಣಿಯಲ್ಲಿ ಭಾರತ ಎ ತಂಡದಲ್ಲಿ ಆಡಲಿದ್ದ ನಿತೀಶ್ ಅವರನ್ನು ಕೋಲ್ಕತ್ತಕ್ಕೆ ಕರೆಸಿಕೊಳ್ಳಲಾಗಿದೆ. ಮಂಗಳವಾರ ಅವರು ಅಭ್ಯಾಸದಲ್ಲಿ ಭಾಗವಹಿಸಿದ್ದರು.
ಭಾರತ ತಂಡವು ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.