ADVERTISEMENT

IND vs SA: ಪಂತ್ ಸಿಕ್ಸರ್ ನೋಡಿ ಗ್ಯಾಲರಿಯಲ್ಲಿ ಕುಳಿತಿದ್ದ ಕೊಹ್ಲಿ ಮಾಡಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜನವರಿ 2022, 10:57 IST
Last Updated 22 ಜನವರಿ 2022, 10:57 IST
ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ    

ಪರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರಿಷಭ್‌ ಪಂತ್‌ ಅವರ ಬಿರುಸಿನ ಆಟವನ್ನು ಕಂಡು ವಿರಾಟ್‌ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಉತ್ಸಾಹ ಮಾತ್ರ ಕುಗ್ಗಿರಲಿಲ್ಲ. ಡ್ರೆಸ್ಸಿಂಗ್ ರೂಮ್‌ನಲ್ಲಿ ಶಿಖರ್‌ ಧವನ್ ಅವರ ಪಕ್ಕದಲ್ಲಿ ಕುಳಿತ್ತಿದ್ದ ಅವರು, ಪಂತ್‌ ಆಟವನ್ನು ಕಂಡು ಆನಂದಿಸಿದರು.

ಪಂತ್‌, ಸಿಕ್ಸರ್ ಸಿಡಿಸಿದ್ದನ್ನು ಕಂಡು ಕೊಹ್ಲಿ ಡ್ಯಾನ್ಸ್‌ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ADVERTISEMENT

ಈ ಪಂದ್ಯದಲ್ಲಿ ಐದು ಎಸೆತಗಳನ್ನು ಎದುರಿಸಿದ್ದ ಕೊಹ್ಲಿ, ಎದುರಾಳಿ ತಂಡದ ಸ್ಪಿನ್ನರ್ ಕೇಶವ್ ಮಹಾರಾಜ್ ಅವರಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು.

ಈ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಏಳು ವಿಕೆಟ್ ಅಂತರದ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 0-2ರ ಅಂತರದಿಂದ ಕೈವಶ ಮಾಡಿಕೊಂಡಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (85), ನಾಯಕ ಕೆ.ಎಲ್. ರಾಹುಲ್ (55) ಆಕರ್ಷಕ ಅರ್ಧಶತಕ ಮತ್ತು ಶಾರ್ದೂಲ್ ಠಾಕೂರ್ (40*) ಬ್ಯಾಟಿಂಗ್ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 287 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು.

ಬಳಿಕ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಆರಂಭಿಕರಾದ ಜೆನ್‌ಮನ್ ಮಲಾನ್ (91) ಹಾಗೂ ಕ್ವಿಂಟನ್ ಡಿಕಾಕ್ (78) ಅಮೋಘ ಅರ್ಧಶತಕಗಳ ನೆರವಿನಿಂದ ಇನ್ನೂ 9 ಎಸೆತಗಳು ಬಾಕಿ ಉಳಿದಿರುವಂತೆಯೇ 48.1 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಪಂತ್‌ ದಾಖಲೆ: ದಕ್ಷಿಣ ಆಫ್ರಿಕಾ ನೆಲದಲ್ಲಿ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ರಾಹುಲ್ ದ್ರಾವಿಡ್ ಮತ್ತು ಎಂ.ಎಸ್. ಧೋನಿ ಅವರನ್ನು ಹಿಂದಿಕ್ಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.