ವಾಷಿಂಗ್ಟನ್ ಸುಂದರ್ ಹಾಗೂ ರವೀಂದ್ರ ಜಡೇಜಾ
– ಪಿಟಿಐ ಚಿತ್ರ
ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಅಕ್ಟೋಬರ್ 2 ರಿಂದ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. ಬುಧವಾರ ಪ್ರಕಟಗೊಂಡ ಶುಭಮಾನ್ ಗಿಲ್ ನಾಯಕತ್ವದ 15 ಆಟಗಾರರ ಪಟ್ಟಿಯಲ್ಲಿ ಜಡೇಜಾ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ.
ತಂಡದಲ್ಲಿದ್ದಾರೆ ಬುಮ್ರಾ
ಅನುಭವಿ ವೇಗಿ ಜಸ್ಪ್ರಿತ್ ಬುಮ್ರಾ ಅವರಿಗೆ ಕೆಲಸದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕಳೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೇವಲ 3 ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಸಲಾಗಿತ್ತು. ಹಾಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅವರಿಗೆ ವಿಶ್ರಾಂತಿ ನೀಡಬಹುದು ಎಂದು ಹೇಳಲಾಗಿತ್ತು. ಆದರೆ, ಅವರನ್ನು ಆಯ್ಕೆ ಮಾಡಲಾಗಿದೆ.
ಕರುಣ್ ನಾಯರ್ ಹೊರಕ್ಕೆ
ಬರೋಬ್ಬರಿ 9 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿದ್ದ ಕರುಣ್ ನಾಯರ್ ಅವರಿಗೆ ಹೆಚ್ಚು ರನ್ ಗಳಿಸಲು ಸಾಧ್ಯವಾಗಿರಲಿಲ್ಲ. ಸರಣಿಯ ಕೊನೆಯ ಪಂದ್ಯದಲ್ಲಿ ಒಂದು ಅರ್ಧಶತಕ ಸಿಡಿಸಿದ್ದು ಹೊರತುಪಡಿಸಿದರೆ ಉಳಿದ ಪಂದ್ಯದಲ್ಲಿ ಬೃಹತ್ ಮೊತ್ತ ದಾಖಲಿಸಲು ವಿಫಲರಾಗಿದ್ದರು. ಹಾಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹೊರಗಿಡಲಾಗಿದೆ.
ಮೂವರು ಕನ್ನಡಿಗರಿಗೆ ಅವಕಾಶ
ಬ್ಯಾಟರ್‌ಗಳಾದ ಕೆ.ಎಲ್. ರಾಹುಲ್, ದೇವದತ್ ಪಡಿಕ್ಕಲ್ ಹಾಗೂ ಪ್ರಸಿದ್ಧ್ ಕೃಷ್ಣ ಅವರು ವಿಂಡೀಸ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ. ಕರುಣ್ ನಾಯರ್ ಜಾಗಕ್ಕೆ ಇನ್ನೋರ್ವ ಕನ್ನಡಿಗನಿಗೆ ಅವಕಾಶ ನೀಡಿದ್ದಾರೆ.
ಪಂತ್‌ಗೆ ರೆಸ್ಟ್
ಇಂಗ್ಲೆಂಡ್ ಸರಣಿಯ ವೇಳೆ ಪಾದದ ಮೂಳೆ ಮುರಿತಕ್ಕೊಳಗಾಗಿದ್ದ ಉಪನಾಯಕ ರಿಷಭ್ ಪಂತ್ ಇನ್ನೂ ಫಿಟ್ ಆಗದ ಹಿನ್ನೆಲೆ ಅವರಿಗೆ ವಿಶ್ರಾಂತಿ ನೀಡಿದ್ದಾರೆ. ಈ ಹಿನ್ನೆಲೆ ಹಿರಿಯ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಉಪನಾಯಕನನ್ನಾಗಿ ನೇಮಿಸಿದ್ದಾರೆ.
ತಂಡ
ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿ.ಕೀ), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿ.ಕೀ), ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.