ADVERTISEMENT

ಕೋವಿಡ್ ಲಸಿಕೆ ಹಾಕಿಸಿಕೊಂಡ ಟೀಮ್ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ

ಏಜೆನ್ಸೀಸ್
Published 10 ಮೇ 2021, 8:27 IST
Last Updated 10 ಮೇ 2021, 8:27 IST
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ ಸ್ಕ್ರೀನ್‌ಶಾಟ್
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ ಸ್ಕ್ರೀನ್‌ಶಾಟ್   

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಸೋಮವಾರದಂದು ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರಿಗೂ ಆದಷ್ಟು ಬೇಗನೇ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿರುವ ವಿರಾಟ್ ಕೊಹ್ಲಿ, ಆದಷ್ಟು ಬೇಗ ಲಸಿಕೆ ಹಾಕಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.

ಭಾರತದ ಬಲಗೈ ವೇಗದ ಬೌಲರ್ ಇಶಾಂತ್ ಶರ್ಮಾ ಮತ್ತು ಪತ್ನಿ ಪ್ರತಿಮಾ ಸಿಂಗ್ ಸಹ ಸೋಮವಾರದಂದೇ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.

ADVERTISEMENT

ಕಳೆದ ವಾರ ಭಾರತೀಯ ಕ್ರಿಕೆಟಿಗರಾದ ಉಮೇಶ್ ಯಾದವ್, ಅಜಿಂಕ್ಯ ರಹಾನೆ ಮತ್ತು ಶಿಖರ್ ಧವನ್ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದರು.

ಎರಡನೇ ಡೋಸ್ ಹಾಕಿಸಿಕೊಳ್ಳುವುದು ಹೇಗೆ?
ಏತನ್ಮಧ್ಯೆ ಜೂನ್ 2ರಂದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಷ್‌ ಫೈನಲ್‌ನಲ್ಲಿ ಭಾಗವಹಿಸುವುದಕ್ಕಾಗಿ ಭಾರತೀಯ ತಂಡದ ಆಟಗಾರರು ಇಂಗ್ಲೆಂಡ್ ಪ್ರಯಾಣ ಬೆಳೆಸಲಿದೆ. ಹಾಗಾಗಿ ಟೆಸ್ಟ್ ತಂಡದ ಭಾಗವಾಗಿರುವ ಆಟಗಾರರು ಎರಡನೇ ಡೋಸ್ ಹಾಕಿಸಿಕೊಳ್ಳುವುದು ಹೇಗೆ ಎಂಬ ಪ್ರಶ್ನೆ ಮೂಡಿದೆ.

ಇದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ), ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಜೊತೆಗೆ ನಿಕಟ ಸಂಪರ್ಕದಲ್ಲಿದ್ದು, ಬ್ರಿಟನ್‌ನಲ್ಲೇ ಎರಡನೇ ಡೋಸ್ ಹಾಕಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಹಾಗೊಂದು ವೇಳೆ ಬ್ರಿಟನ್ ಸರ್ಕಾರದಿಂದ ಒಪ್ಪಿಗೆ ಸಿಗದಿದ್ದರೆ ಭಾರತದಲ್ಲೇ ಲಸಿಕೆ ಪಡೆಯಬೇಕಾಗುತ್ತದೆ. ಸ್ವಲ್ಪ ದಿನಗಳು ಕಾಯೋಣ ಎಂದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಎಎನ್‌ಐಗೆ ಮಾಹಿತಿ ನೀಡಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಜೂನ್ 18ರಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಸೌಂಥಪ್ಟನ್‌ನಲ್ಲಿ ನಡೆಯಲಿದೆ. ಕಳೆದ ಶುಕ್ರವಾರವಷ್ಟೇ ಬಿಸಿಸಿಐ ಭಾರತ ತಂಡವನ್ನು ಆರಿಸಿತ್ತು. ಆದರೆ ಮೀಸಲು ಆಟಗಾರನಾಗಿರುವ ಕರ್ನಾಟಕ ವೇಗಿ ಪ್ರಸಿದ್ಧ ಕೃಷ್ಣ ಅವರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಪ್ರವಾಸ ಬೆಳೆಸುವರೇ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.