
ಕೆ.ಎಲ್. ರಾಹುಲ್
(ಪಿಟಿಐ ಚಿತ್ರ)
ಬೆಂಗಳೂರು: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ಕನ್ನಡಿಗ ಕೆ.ಎಲ್.ರಾಹುಲ್ ವಹಿಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಟೀಮ್ ಇಂಡಿಯಾ ಏಕದಿನ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್ ಕುತ್ತಿಗೆ ನೋವಿನಿಂದ ಬಳಲುತ್ತಿದ್ದು, ಮೂರು ಪಂದ್ಯಗಳ ಏಕದಿನ ಸರಣಿಗೆ ಲಭ್ಯರಾಗುವುದು ಅನುಮಾನವೆನಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡಿಗ ರಾಹುಲ್ ಹೆಸರು ಮುನ್ನಲೆಗೆ ಬಂದಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಪ್ರಸಕ್ತ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಿಲ್ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ.
ಟೆಸ್ಟ್ ಸರಣಿಯ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿಯು ನಡೆಯಲಿದೆ. ಗಿಲ್ ಮೇಲೆ ವೈದ್ಯಕೀಯ ತಂಡ ನಿಗಾ ವಹಿಸುತ್ತಿದ್ದು, ಅವರ ಲಭ್ಯತೆಯ ಬಗ್ಗೆ ಇನ್ನಷ್ಟೇ ಖಚಿತತೆ ಸಿಗಬೇಕಿದೆ.
ಕಳೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ವೇಳೆ ಗಾಯಗೊಂಡಿದ್ದ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಸಹ ಸರಣಿಗೆ ಅಲಭ್ಯರಾಗಲಿದ್ದಾರೆ.
ದ.ಆಫ್ರಿಕಾ ವಿರುದ್ಧದ ಏಕದಿನ ಸರಣಿಯು ನವೆಂಬರ್ 30ರಂದು ಆರಂಭವಾಗಲಿದೆ. ಮಾಜಿ ನಾಯಕರುಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸಹ ತಂಡವನ್ನು ಸೇರಿಸಿಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.