ADVERTISEMENT

IPL 2021: ಆಟಗಾರರ ಸುರಕ್ಷತೆಗೆ ಮೊದಲ ಆದ್ಯತೆ; ಬಿಸಿಸಿಐ ಕಾರ್ಯದರ್ಶಿ

ಏಜೆನ್ಸೀಸ್
Published 4 ಮೇ 2021, 9:19 IST
Last Updated 4 ಮೇ 2021, 9:19 IST
   

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗಿಯಾದ ಪ್ರತಿಯೊಬ್ಬರ ಸುರಕ್ಷತೆಗೆ ಮೊದಲ ಆದತ್ಯೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಟೂರ್ನಿಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಧಾನ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಬಯೋಬಬಲ್‌ಗೆ ಕೋವಿಡ್-19 ಪಿಡುಗು ಲಗ್ಗೆಯಿಟ್ಟಿರುವ ಬೆನ್ನಲ್ಲೇ ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಲೀಗ್ ಅನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಐಪಿಎಲ್ ಆಡಳಿತ ಮಂಡಳಿಯು, ಆಟಗಾರರು ಸೇರದಂತೆ ಐಪಿಎಲ್ ಭಾಗಿಯಾಗಿರುವ ಎಲ್ಲರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತತ್‌ಕ್ಷಣದಿಂದಲೇ ಐಪಿಎಲ್ ಟೂರ್ನಿಯನ್ನು ಸ್ಥಗಿತಗೊಳಿಸಲಾಗಿದ್ದು, ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿದೆ ಎಂದು ಹೇಳಿದೆ.

ಮುಂದಿನ ಸೂಚನೆ ಬರುವ ವರೆಗೂ ಐಪಿಎಲ್ 14ನೇ ಆವೃತ್ತಿಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲು ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿವೆ. ಆಟಗಾರರು, ಮೈದಾನ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಟೂರ್ನಿಯಲ್ಲಿ ಭಾಗಿಯಾದ ಪ್ರತಿಯೊಬ್ಬರ ಸುರಕ್ಷತೆದೃಷ್ಟಿಕೋನದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ನಾವು ಬಯಸುತ್ತಿಲ್ಲ ಎಂದು ಜಯ್ ಶಾ ಸ್ಪಷ್ಟಪಡಿಸಿದ್ದಾರೆ.



ಕೆಕೆಆರ್, ಚೆನ್ನೈ ಬೆನ್ನಲ್ಲೇ ಎಸ್‌ಆರ್‌ಎಚ್ ಬಯೋಬಬಲ್‌ಗೂ ಕೋವಿಡ್ ಸೋಂಕು ಲಗ್ಗೆಯಿಟ್ಟಿತ್ತು. ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ವೃದ್ಧಿಮಾನ್ ಸಹಾ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದರಿಂದಾಗಿ ಇಂದಿನ (ಮಂಗಳವಾರ) ಪಂದ್ಯವನ್ನು ಮುಂದೂಡಲು ನಿರ್ಧರಿಸಲಾಗಿತ್ತು. ಈ ಬೆನ್ನಲ್ಲೇ ತುರ್ತು ಸಭೆ ನಡೆಸಿರುವ ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿಯು ತತ್‌ಕ್ಷಣದಿಂದಲೇ ಟೂರ್ನಿಯನ್ನು ಸ್ಥಗಿತಗೊಳಿಸಿ, ಅನಿರ್ದಿಷ್ಟ ಅವಧಿಗೆ ಮುಂದೂಡಲು ನಿರ್ಧರಿಸಿದೆ.

ಈ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಎಲ್. ಬಾಲಾಜಿ ಸೇರಿದಂತೆ ಮೂವರಲ್ಲಿ ಸೋಂಕು ದೃಢಪಟ್ಟಿತ್ತು. ಇದರಿಂದಾಗಿ ಬುಧವಾರದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ಮುಂದೂಡಲಾಗಿತ್ತು. ಕೋಲ್ಕತ್ತ ನೈಟ್ ರೈಡರ್ಸ್ ಆಟಗಾರರಾದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ ಅವರಿಗೆ ಸೋಮವಾರ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಆರ್‌ಸಿಬಿ-ಕೆಕೆಆರ್ ನಡುವಣ ಪಂದ್ಯವೂ ಮುಂದೂಡಿಕೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.